ADVERTISEMENT

ನೀತಿ ಸಂಹಿತೆ ತಾರತಮ್ಯ: ಕೇಂದ್ರ ಚುನಾವಣಾ ಆಯೋಗಕ್ಕೆ ತುರ್ತು ನೋಟಿಸ್‌

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2019, 12:46 IST
Last Updated 1 ಡಿಸೆಂಬರ್ 2019, 12:46 IST

ಬೆಂಗಳೂರು: ‘ಉಪ ಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳಲ್ಲಿ ಕೆಲವೆಡೆ ಮಾದರಿ ನೀತಿ ಸಂಹಿತೆಯನ್ನು ಜಿಲ್ಲೆಯಾದ್ಯಂತ ಜಾರಿಗೊಳಿಸಿದ್ದರೆ, ಮತ್ತೆ ಕೆಲವೆಡೆ ಆಯಾ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರವೇ ಅನ್ವಯಿಸಲಾಗಿರುವುದು ಸಂವಿಧಾನದ 14 ಮತ್ತು 21ನೇ ವಿಧಿಯ ಉಲ್ಲಂಘನೆಯಾಗಿದೆ’ ಎಂಬ ಆಕ್ಷೇಪಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯುಕ್ತರಿಗೆ ತುರ್ತು ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ಅಂಕೋಲಾ ತಾಲ್ಲೂಕು ಕಾನಕಾನಹಳ್ಳಿಯ ಶಿವರಾಮ ಗೋಪಾಲಕೃಷ್ಣ ಗಾಂವಕರ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ನಡೆಸಿತು.

ಪ್ರತಿವಾದಿಗಳಾದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಹಾಗೂ ಕೇಂದ್ರ ಕಾನೂನು ಸಚಿವಾಲಯದ ಕಾರ್ಯದರ್ಶಿಗಳಿಗೂ ತುರ್ತು ನೋಟಿಸ್‌ ಜಾರಿಗೆ ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಡಿಸೆಂಬರ್‌ 6ಕ್ಕೆ ಮುಂದೂಡಿದೆ.

ADVERTISEMENT

ಆಕ್ಷೇಪಣೆ ಏನು?: ‘ಯಲ್ಲಾಪುರ, ಹಿರೇಕೆರೂರು, ರಾಣೆಬೆನ್ನೂರು, ಚಿಕ್ಕಬಳ್ಳಾಪುರ, ಹೊಸಕೋಟೆ ಮತ್ತು ಕೆ.ಆರ್.ಪೇಟೆಗಳಲ್ಲಿ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ ಮಾಡಿದ್ದರೆ ಅಥಣಿ, ಕಾಗವಾಡ, ಗೋಕಾಕ, ವಿಜಯನಗರ, ಕೆ.ಆರ್.ಪುರ, ಯಶವಂತಪುರ, ಮಹಾಲಕ್ಷ್ಮಿ ಲೇ ಔಟ್‌, ಶಿವಾಜಿನಗರ ಮತ್ತು ಹುಣಸೂರು ಕ್ಷೇತ್ರಗಳಲ್ಲಿ ಆಯಾ ವಿಧಾನಸಭಾ ಕ್ಷೇತ್ರಗಳಿಗೆ ಮಾತ್ರವೇ ಅನ್ವಯವಾಗುವಂತೆ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ’ ಎಂಬುದು ಅರ್ಜಿದಾರರ ಆಕ್ಷೇಪ.

‘ಆಯೋಗದ ಈ ಕ್ರಮದಿಂದ ನಾಗರಿಕರ ಹಕ್ಕುಗಳಿಗೆ ಚ್ಯುತಿಯುಂಟಾಗಿದೆ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ತತ್ವಕ್ಕೆ ವಿರುದ್ಧವಾಗಿದೆ’ ಎಂದು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.