ಆಸ್ಪತ್ರೆ
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಪದ್ಧತಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶುಶ್ರೂಷಾಧಿಕಾರಿಗಳ ಸೇವೆಯನ್ನು ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫೆಬ್ರುವರಿ 24ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘ ತಿಳಿಸಿದೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷೆ ರಾಧಾ ಸುರೇಶ್ ಪಿ.ಎನ್., ‘ಸುಪ್ರೀಂ ಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನಿಗದಿಪಡಿಸಬೇಕು. ಈಗ ನಮಗೆ ₹15 ಸಾವಿರ ವೇತನ ನಿಗದಿಪಡಿಸಲಾಗಿದೆ. ಇಂದಿನ ಬೆಲೆ ಏರಿಕೆ ಪರಿಸ್ಥಿತಿಯಲ್ಲಿ ಈ ಹಣದಲ್ಲಿ ಜೀವನ ನಿರ್ವಹಣೆ ಕಷ್ಟವಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಶುಶ್ರೂಷಾಧಿಕಾರಿಗಳಿಗೆ ನಿಗದಿಪಡಿಸಿರುವ ವೇತನವನ್ನು ನಮಗೂ ನೀಡಬೇಕು’ ಎಂದು ಆಗ್ರಹಿಸಿದರು.
‘ನೇರ ನೇಮಕಾತಿಯ ಸಂದರ್ಭದಲ್ಲಿ ಜ್ಯೇಷ್ಠತೆಯ ಆಧಾರದ ಮೇಲೆ ಕೃಪಾಂಕ ಮತ್ತು ವಯೋಮಿತಿ ಸಡಿಲಿಕೆ ನೀಡಬೇಕು. ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ವರ್ಗಾವಣೆ ಸೌಲಭ್ಯ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.
ಸಂಘದ ಉಪಾಧ್ಯಕ್ಷ ಸಂಗನ ಬಸವ, ಪ್ರಧಾನ ಕಾರ್ಯದರ್ಶಿ ಸೌಮ್ಯಶ್ರೀ ಕೆ. ಸುದ್ದಿಗೋಷ್ಠಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.