ADVERTISEMENT

ಪೌಷ್ಠಿಕಾಂಶ ಮೇಲ್ವಿಚಾರಣಾ ಸಮಿತಿ: ಹೆಸರು ಸೂಚಿಸಲು ಹೈಕೋರ್ಟ್‌ ನಿರ್ದೇಶನ

ಪೌಷ್ಠಿಕಾಂಶ ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ ಸ್ಥಾನ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2021, 19:31 IST
Last Updated 9 ನವೆಂಬರ್ 2021, 19:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಅಪೌಷ್ಠಿಕ ಮಕ್ಕಳು, ಗರ್ಭಿಣಿಯರು, ಬಾಣಂತಿಯರು, ಹಾಲುಣಿಸುವ ತಾಯಂದಿರು, ಕಿಶೋರಾವಸ್ಥೆಯ ಹೆಣ್ಣುಮಕ್ಕಳನ್ನು ಗುರುತಿಸುವ, ಆರೋಗ್ಯ ತಪಾಸಣೆ ಮಾಡುವ ಮತ್ತು ಪೌಷ್ಟಿಕಾಂಶ ಒದಗಿಸುವ ಕಾರ್ಯಕ್ರಮಗಳ ಮೇಲ್ವಿಚಾರಣಾ ಸಮಿತಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡುವ ದಿಸೆಯಲ್ಲಿ, ಹೈಕೋರ್ಟ್‌ನ ಮೂವರು ನಿವೃತ್ತ ನ್ಯಾಯಮೂರ್ತಿಗಳ ಹೆಸರು ನೀಡಿ’ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ರಾಜ್ಯದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ವಿಚಾರಕ್ಕೆ ಸಂಬಂಧಿಸಿದಂತೆ ಅಥಣಿಯ ‘ವಿಮೋಚನಾ ಸಂಘ’ ಸ್ವಯಂಸೇವಾ ಸಂಸ್ಥೆಯ ಅಧ್ಯಕ್ಷ ಬಿ.ಎಲ್. ಪಾಟೀಲ್ 2011ರಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಪ್ರಕರಣದ ಅಮಿಕಸ್‌ ಕ್ಯೂರಿ (ಕೋರ್ಟ್‌ಗೆ ಸಹಕರಿಸುವ ವಕೀಲ) ಕ್ಲಿಫ್ಟನ್‌ ಡಿ. ರೊಜಾರಿಯೊ, ‘ಸಮಿತಿಯ ಅಧ್ಯಕ್ಷರಾಗಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್. ವೇಣುಗೋಪಾಲಗೌಡ ಅವರು ರಾಜೀನಾಮೆ ಕೊಟ್ಟಿದ್ದಾರೆ. ಆದ್ದರಿಂದ, ಬೇರೊಬ್ಬ ಅಧ್ಯಕ್ಷರನ್ನು ನೇಮಕ ಮಾಡುವುದು ಸೂಕ್ತ’ ಎಂದು ತಿಳಿಸಿದರು.

ADVERTISEMENT

ಇದನ್ನು ಪರಿಗಣಿಸಿದ ನ್ಯಾಯಪೀಠ, ‘ಹೈಕೋರ್ಟ್‌ನ ಮೂವರು ನಿವೃತ್ತ ನ್ಯಾಯಮೂರ್ತಿಗಳ ಹೆಸರನ್ನು ನೀಡಿ’ ಎಂದು ಪ್ರಾಧಿಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಇದೇ 17ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.