ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ (ಕೆಪಿಟಿಸಿಎಲ್) ಜ್ಯೂನಿಯರ್ ಪವರ್ ಆಪರೇಟರ್ ಹಾಗೂ ಜ್ಯೂನಿಯರ್ ಪವರ್ ಮ್ಯಾನ್ ಹುದ್ದೆಗಳನ್ನು ನೇರ ನೇಮಕಾತಿ ವಿಧಾನದ ಮೂಲಕ ಭರ್ತಿ ಮಾಡುವ ಪ್ರಕ್ರಿಯೆಯನ್ನು ಆಕ್ಷೇಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಕೆಪಿಟಿಸಿಎಲ್‌ಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ, ‘ಆಲ್ ಕರ್ನಾಟಕ ಸ್ಟೇಟ್ ಸ್ಟೂಡೆಂಟ್ಸ್ ಅಸೋಸಿಯೇಷನ್‘ ಅಧ್ಯಕ್ಷ ಆರ್.ಕಾಂತಕುಮಾರ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲೆ ಎಸ್.ಸುಶೀಲಾ ಅವರ ವಾದ ಆಲಿಸಿದ ನ್ಯಾಯಪೀಠ, ‘ನೇಮಕಾತಿಗೆ ಯಾವ ಪ್ರಕ್ರಿಯೆ ಅಥವಾ ವಿಧಾನ ಅನುಸರಿಸಲಾಗುತ್ತಿದೆ ಎಂಬುದರ ಬಗ್ಗೆ ವಿವರಣೆ ನೀಡಿ’ ಎಂದು ಕೆಪಿಟಿಸಿಎಲ್‌ಗೆ ಸೂಚಿಸಿ ವಿಚಾರಣೆಯನ್ನು ಇದೇ 21ಕ್ಕೆ ಮುಂದೂಡಿತು. ವಕೀಲ ಜಿ.ಸುಹಾಸ್ ವಕಾಲತ್ತು ವಹಿಸಿದ್ದಾರೆ.
ಕೋರಿಕೆ ಏನು?: ‘ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದಲ್ಲಿ ನೇರ ನೇಮಕಾತಿ ಮಾಡಿಕೊಳ್ಳುವ ಅಧಿಸೂಚನೆಯನ್ನು ರದ್ದುಪಡಿಸಬೇಕು. ನೇಮಕಾತಿ ಪ್ರಕ್ರಿಯೆ ಮರು ಪರಿಗಣಿಸುವಂತೆ ಕೆಪಿಟಿಸಿಎಲ್‌ಗೆ ನಿರ್ದೇಶಿಸಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ ನಡೆಸುವ ಪಂಜಾಬ್ ಹಾಗೂ ತೆಲಂಗಾಣ ರಾಜ್ಯಗಳ ವಿದ್ಯುತ್ ನಿಗಮಗಳ ವಿಧಾನವನ್ನು ಅಳವಡಿಸಿಕೊಳ್ಳುವಂತೆ ರಾಜ್ಯ ಸರ್ಕಾರ ಮತ್ತು ಕೆಪಿಟಿಸಿಎಲ್‌ಗೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.