ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ವರದಿ ವಿಚಾರದ ಕುರಿತು ಚರ್ಚಿಸಲು ಕುಮಾರ ಪಾರ್ಕ್ ಗಾಂಧಿ ಭವನ ರಸ್ತೆಯಲ್ಲಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸರ್ಕಾರಿ ನಿವಾಸದಲ್ಲಿ ಮಂಗಳವಾರ ಸಂಜೆ 6 ಗಂಟೆಗೆ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಶಾಸಕರ ಸಭೆ ನಡೆಯಲಿದೆ.
ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಡಿ.ಕೆ.ಶಿವಕುಮಾರ್, ‘ನಾನು ಈ ವರದಿಯನ್ನು ಸಂಪೂರ್ಣವಾಗಿ ನೋಡಿಲ್ಲ. ವರದಿಯ ಅಧ್ಯಯನ ಮಾಡಲಾಗುತ್ತಿದೆ. ಈ ಕುರಿತು ಚರ್ಚಿಸಲು ಪಕ್ಷದ ನಮ್ಮ ಸಮುದಾಯದ ಶಾಸಕರ ಸಭೆ ಕರೆದಿದ್ದೇನೆ. ಅವರಿಂದ ಅಭಿಪ್ರಾಯ ಸಂಗ್ರಹಿಸಲಾಗುವುದು. ಯಾರ ಮನಸ್ಸನ್ನೂ ನೋಯಿಸದೆ ಎಲ್ಲರ ಗೌರವ ಕಾಪಾಡಲು ಸಲಹೆ ನೀಡುತ್ತೇನೆ’ ಎಂದರು.
ಎಲ್ಲರಿಗೂ ನ್ಯಾಯ: ‘ಧರ್ಮದ ಆಧಾರದಲ್ಲಿ ಟೆಂಡರ್ ನೀಡಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಹಕ್ಕುಗಳನ್ನು ಕಾಂಗ್ರೆಸ್ ಸರ್ಕಾರ ಕಸಿಯುತ್ತಿದೆ’ ಎನ್ನುವ ಆರೋಪದ ಬಗ್ಗೆ ಕೇಳಿದಾಗ, ‘ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೂ ಮೀಸಲಾತಿ ನೀಡಲಾಗಿದೆ. ಸಮಾಜದಲ್ಲಿ ಯಾರು ಆರ್ಥಿಕವಾಗಿ ಹಿಂದುಳಿದಿದ್ದಾರೊ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ನಮ್ಮ ಆದ್ಯತೆ. ಕಾಂಗ್ರೆಸ್ ಪಕ್ಷ ಸಮಾಜದ ಎಲ್ಲ ವರ್ಗಗಳಿಗೂ ನ್ಯಾಯ ಒದಗಿಸುವ ಪಕ್ಷ’ ಎಂದರು.
‘ಒಬಿಸಿಗಳ ಮೀಸಲಾತಿಯನ್ನು ಕಾಂಗ್ರೆಸ್ ಕಿತ್ತುಕೊಂಡಿದೆ’ ಎನ್ನುವ ಪ್ರಧಾನಿ ಮೋದಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಂಡಿಲ್ಲ. ಬೆಂಗಳೂರಿನ ಸಂಸದರೊಬ್ಬರು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಎದೆ ಸೀಳಿದರೆ ಅಕ್ಷರವಿಲ್ಲ, ಪಂಕ್ಚರ್ ಹಾಕಲು ಮಾತ್ರ ಸೀಮಿತ ಎಂದು ದ್ವೇಷ ಕಾರಿದ್ದರು. ಆದರೆ, ನಾವು ಆ ಸಮುದಾಯ ಇತರೇ ಕೆಲಸಗಳನ್ನು ಮಾಡಲು ಸಾಮರ್ಥ್ಯ ಹೊಂದಿದೆ ಎಂದು ತೋರಿಸಬೇಕಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.