ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಪ್ರಕರಣದಲ್ಲಿ ಪತ್ನಿ ಪಲ್ಲವಿ ಅವರನ್ನು ವಶಕ್ಕೆ ಪಡೆದುಕೊಂಡಿರುವ ಸಿಸಿಬಿ ಪೊಲೀಸರು, ವಿಚಾರಣೆ ತೀವ್ರಗೊಳಿಸಿದ್ದಾರೆ
ಎಸಿಪಿ ಧರ್ಮೇಂದ್ರ ನೇತೃತ್ವದ ಪೊಲೀಸ್ ತಂಡವು ಆರೋಪಿಯ ವಿಚಾರಣೆ ನಡೆಸುತ್ತಿದೆ. ಕೃತ್ಯದ ಸ್ಥಳದಲ್ಲಿ ಪತ್ತೆಯಾದ ಚಾಕು, ಖಾರದ ಪುಡಿ ಹಾಗೂ ಘಟನೆ ನಡೆದ ವೇಳೆ ಮನೆಯಲ್ಲಿ ಯಾರ್‍ಯಾರು ಇದ್ದರು ಎಂಬ ಪ್ರಶ್ನೆಗಳನ್ನು ಕೇಳಿ, ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ.
ಅಲ್ಲದೇ 8–10 ಬಾರಿ ಇರಿದು ಹತ್ಯೆ ಮಾಡಿರುವ ಬಗ್ಗೆ ಆರೋಪಿ ಸರಿಯಾದ ಮಾಹಿತಿ ನೀಡುತ್ತಿಲ್ಲ. ಕೌಟುಂಬಿಕ ಸಮಸ್ಯೆಯಿಂದಾಗಿ ಕೃತ್ಯವೆಸಗಿರುವುದಾಗಿ ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೃತ್ಯದಲ್ಲಿ ಓಂ ಪ್ರಕಾಶ್ ಅವರ ಪುತ್ರಿ ಕೃತಿ ಭಾಗಿಯಾಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪುತ್ರಿಯ ಬಗ್ಗೆಯೂ ಸರಿಯಾದ ಮಾಹಿತಿ ನೀಡುತ್ತಿಲ್ಲ. ಹಾಗಾಗಿ ಕೃತಿ ಅವರ ವಿಚಾರಣೆಗೆ ಸಿಸಿಬಿ ಪೊಲೀಸರು ಸಿದ್ಧತೆ ನಡೆಸಿದ್ದು, ಸದ್ಯದಲ್ಲೇ ನೋಟಿಸ್ ಜಾರಿ ಮಾಡಲಾಗುತ್ತದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಮ್ಮೆ ಓಂ ಪ್ರಕಾಶ್ ಅವರ ಮಗ ಮತ್ತು ಕುಟುಂಬಸ್ಥರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ ಎಂಬುದು ಗೊತ್ತಾಗಿದೆ.
ಏಪ್ರಿಲ್ 20ರಂದು ಎಚ್‌ಎಸ್‌ಆರ್ ಲೇಔಟ್ ಮನೆಯಲ್ಲಿ ಓಂ ಪ್ರಕಾಶ್ ಅವರ ಕೊಲೆ ನಡೆದಿತ್ತು. ಎಚ್‌ಎಸ್‌ಆರ್ ಠಾಣೆ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದರು, ನಂತರ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.