ADVERTISEMENT

ಆನ್‌ಲೈನ್‌ ಜೂಜು: ಸಿಎಸ್‌ ಹೇಳಿಕೆಗೆ ಹೈಕೋರ್ಟ್‌ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 30 ಜೂನ್ 2021, 4:36 IST
Last Updated 30 ಜೂನ್ 2021, 4:36 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಆನ್‌ಲೈನ್‌ ಜೂಜಿನ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸುವ ದಿಸೆಯಲ್ಲಿ ಹೇಳಿಕೆಯೊಂದನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್‌ ವಿಭಾಗೀಯ ಪೀಠ ನಿರ್ದೇಶನ ನೀಡಿದೆ.

ಆನ್‌ಲೈನ್‌ ಜೂಜು ನಿಯಂತ್ರಣಕ್ಕೆ ನಿಯಮಗಳನ್ನು ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ದಾವಣಗೆರೆಯ ಡಿ.ಆರ್‌. ಶಾರದಾ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ಕೋರಿಕೆಯಂತೆ ಹಲವು ಬಾರಿ ವಿಚಾರಣೆ ಮುಂದೂಡಲಾಗಿತ್ತು. ಮಂಗಳವಾರದ ವಿಚಾರಣೆ ವೇಳೆಯೂ ಸರ್ಕಾರ, ತನ್ನ ನಿಲುವು ಸ್ಪಷ್ಟಪಡಿಸಲಿಲ್ಲ. ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ನೇತೃತ್ವದ ವಿಭಾಗೀಯ ಪೀಠ, ಹೇಳಿಕೆ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿತು.

2020ರ ನವೆಂಬರ್‌ನಲ್ಲಿ ಸಾರ್ವಜನಿಕ ಹಿತಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ನಾಲ್ಕು ತಿಂಗಳಾದರೂ ಈ ಸಂಬಂಧ ಸಂಪುಟ ಸಭೆಯ ನಿರ್ಣಯ ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಿರಲಿಲ್ಲ. ಮತ್ತೆ ಎರಡು ವಾರಗಳ ಕಾಲ ವಿಚಾರಣೆ ಮುಂದೂಡುವಂತೆ ಸರ್ಕಾರದ ಪರ ವಕೀಲರು ಮನವಿ ಮಾಡಿದರು.

ADVERTISEMENT

‘ನಾಲ್ಕು ತಿಂಗಳಾದರೂ ಈ ವಿಚಾರದಲ್ಲಿ ಸರ್ಕಾರದ ನಿಲುವು ಸ್ಪಷ್ಟಪಡಿಸುವುದಕ್ಕೆ ಪೂರಕವಾಗಿ ಸಂಪುಟ ಸಭೆಯ ನಿರ್ಣಯ ಮತ್ತು ಆಕ್ಷೇಪಣೆ ಸಲ್ಲಿಸಿಲ್ಲ. ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಇನ್ನು ನಮಗೆ ಬೇರೆ ಯಾವುದೇ ದಾರಿಗಳಿಲ್ಲ. ಯಾವ ಕಾರಣಕ್ಕಾಗಿ ನ್ಯಾಯಾಲಯದ ಆದೇಶವನ್ನು ಪಾಲಿಸಿಲ್ಲ ಎಂಬುದರ ಕುರಿತು ಒಂದು ವಾರದೊಳಗೆ ಮುಖ್ಯ ಕಾರ್ಯದರ್ಶಿ ಪ್ರಮಾಣಪತ್ರ ಸಲ್ಲಿಸಬೇಕು’ ಎಂದು ವಿಭಾಗೀಯ ಪೀಠ ತಾಕೀತು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.