ADVERTISEMENT

ಶಿಕ್ಷಕರ ವರ್ಗಾವಣೆಗೆ ಸುಗ್ರೀವಾಜ್ಞೆ: ಎಸ್.ಸುರೇಶ್‌ಕುಮಾರ್

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2021, 21:19 IST
Last Updated 5 ಏಪ್ರಿಲ್ 2021, 21:19 IST
ಎಸ್‌. ಸುರೇಶ್‌ ಕುಮಾರ್
ಎಸ್‌. ಸುರೇಶ್‌ ಕುಮಾರ್   

ಬೆಂಗಳೂರು: ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಪುನಃ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ಪಡೆಯಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ತಿಳಿಸಿದರು.

‘ರಾಜ್ಯದಲ್ಲಿ ಸಾವಿರಾರು ಶಿಕ್ಷಕರು ಹಲವು ವರ್ಷಗಳಿಂದ ವರ್ಗಾವಣೆಯ ನಿರೀಕ್ಷೆಯಲ್ಲಿದ್ದಾರೆ. ನಮ್ಮ ಸರ್ಕಾರ ಬಂದ ಆರಂಭದಲ್ಲಿ ವರ್ಗಾವಣೆಯ ಭರವಸೆ ನೀಡಿದ್ದೆವು. ಅದನ್ನು ಈಡೇರಿಸುವುದು ನಮ್ಮ ಕರ್ತವ್ಯ ಆಗಿರುವುದರಿಂದ ಸುಗ್ರೀವಾಜ್ಞೆ ಸಿದ್ಧಪಡಿಸಲಾಗಿದೆ’ ಎಂದು ಅವರು ‘ಪ್ರಜಾವಾಣಿ’ಗೆ ಹೇಳಿದರು.

ಈ ಹಿಂದೆ ವರ್ಗಾವಣೆಗೆ ಸಿದ್ಧತೆ ನಡೆಸಿದಾಗ, ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಯನ್ನು ಪ್ರಶ್ನಿಸಿ ಶಿಕ್ಷಕರೊಬ್ಬರು ಕರ್ನಾಟಕ ಆಡಳಿತ ನ್ಯಾಯಮಂಡಳಿಯಿಂದ ವರ್ಗಾವಣೆ ಪ್ರಕ್ರಿಯೆ ತಡೆ ತರಲಾಗಿತ್ತು. 2016–17 ರಲ್ಲಿ ಹೆಚ್ಚುವರಿ ಶಿಕ್ಷಕರೆಂದು ಗುರುತಿಸಿದ ಕಾರಣಕ್ಕೆ ಅನೇಕ ಶಿಕ್ಷಕರು ಬೇರೆ ತಾಲ್ಲೂಕಿಗೆ ವರ್ಗಾವಣೆಗೊಂಡಿದ್ದರು. ಈ ರೀತಿಯ ಸಂಕಷ್ಟ ಅನುಭವಿಸುತ್ತಿರುವ ಕೆಲವು ಶಿಕ್ಷಕರು, ತಮ್ಮನ್ನು ಬಿಟ್ಟು 2019–20ರಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಗೆ ಒಳಗಾದವರಿಗೆ ಕೌನ್ಸೆಲಿಂಗ್‌ನಲ್ಲಿ ಆದ್ಯತೆ ನೀಡಿರುವುದನ್ನು ಪ್ರಶ್ನಿಸಿ ಕೆಎಟಿಗೆ ದೂರು ನೀಡಿದ್ದರು.

ADVERTISEMENT

ಕೆಎಟಿ ಆದೇಶದಿಂದಾಗಿ, ಕೋರಿಕೆ ಮತ್ತು ಪರಸ್ಪರ ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಿ, ಕೌನ್ಸೆಲಿಂಗ್‌ನ ನಿರೀಕ್ಷೆಯಲ್ಲಿದ್ದ 75 ಸಾವಿರಕ್ಕೂ ಹೆಚ್ಚು ಶಿಕ್ಷಕರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ‘ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ–2020’ ಕ್ಕೆ ಕೆಲವು ಮಾರ್ಪಾಡುಗಳನ್ನು ಮಾಡಿ ಸುಗ್ರೀವಾಜ್ಞೆ ಹೊರಡಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.