ADVERTISEMENT

ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ | ಬೇಡಿಕೆ ಈಡೇರಿಸಲು ಎರಡು ತಿಂಗಳ ಗಡುವು

​ಪ್ರಜಾವಾಣಿ ವಾರ್ತೆ
Published 9 ಜುಲೈ 2019, 20:00 IST
Last Updated 9 ಜುಲೈ 2019, 20:00 IST
ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಆನಂದರಾವ್‌ ವೃತ್ತದ ಗಾಂಧಿ ಪ್ರತಿಮೆ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು - ಪ್ರಜಾವಾಣಿ ಚಿತ್ರ
ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಆನಂದರಾವ್‌ ವೃತ್ತದ ಗಾಂಧಿ ಪ್ರತಿಮೆ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು - ಪ್ರಜಾವಾಣಿ ಚಿತ್ರ   

ಬೆಂಗಳೂರು: ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪದವಿ ಶಿಕ್ಷಕರ ‘ಪದವಿ ನಾಮಕರಣ’ ಬಿಕ್ಕಟ್ಟನ್ನು ತಕ್ಷಣ ಬಗೆಹರಿಸಬೇಕು ಎಂಬ ಪ್ರಮುಖ ಬೇಡಿಕೆ ಸಹಿತ ಹಲವು ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ರಾಜ್ಯದ ಎಲ್ಲೆಡೆ ಮಂಗಳವಾರ ಶಿಕ್ಷಕರು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ನಡೆದ ಈ ಪ್ರತಿಭಟನೆಯಿಂದಾಗಿ 45ಸಾವಿರಕ್ಕೂ ಅಧಿಕ ಸರ್ಕಾರಿಶಾಲೆಗಳು ಬಂದ್‌ ಆಗಿದ್ದವು. ಧಾರವಾಡ ಮತ್ತು ಹೊಸಪೇಟೆಯ ಕೆಲವು ಶಾಲೆಗಳು ಮಾತ್ರ ಎಂದಿನಂತೆ ಕಾರ್ಯ ನಿರ್ವಹಿಸಿದವು.

‘ಬೇಡಿಕೆಗಳನ್ನು ಈಡೇರಿಸಲು 2 ತಿಂಗಳ ಗಡುವು ನೀಡಿದ್ದೇವೆ. ಅದನ್ನು ಈಡೇರಿಸದೆ ಇದ್ದರೆ ಸೆ.5ರ ಶಿಕ್ಷಕರ ದಿನವನ್ನು ಬಹಿಷ್ಕರಿಸಿ ವಿಧಾನಸೌಧ ಚಲೊ ನಡೆಸಲು ನಿರ್ಧರಿಸಿದ್ದೇವೆ. ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಅವರನ್ನೂ ಭೇಟಿ ಮಾಡಲಿದ್ದೇವೆ’ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎನ್‌.ಎಸ್. ಚಂದ್ರಶೇಖರ್‌ ತಿಳಿಸಿದರು.

ADVERTISEMENT

ಶಿಕ್ಷಕರ ಬೇಡಿಕೆಗಳು

ಪ್ರಾಥಮಿಕ ಶಾಲೆಗಳ ಹಾಲಿ ಪದವೀಧರರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ (ವೃಂದ ಮತ್ತು ನೇಮಕಾತಿ ನಿಮಯ ಬದಲಾಯಿಸಿ) ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಶ್ರೇಣಿ ನಿಗದಿಗೊಳಿಸಬೇಕು, ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆಯನ್ನೇ ಮುಂದುವರಿಸಬೇಕು, ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಕ್ಟೋಬರ್‌ನಲ್ಲಿ ಮತ್ತೊಮ್ಮೆ ಕೇವಲ ಕೋರಿಕೆ ವರ್ಗಾವಣೆ ನಡೆಸಬೇಕು, ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು, ಹೆಚ್ಚುವರಿ ಶಿಕ್ಷಕರ ವಿಚಾರದಲ್ಲಿನ ನ್ಯೂನತೆ ಸರಿಪಡಿಸಿ ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸಬೇಕು, ಗ್ರಾಮೀಣ ಕೃಪಾಂಕ ಶಿಕ್ಷಕರ ವಜಾ ಆದ ಸೇವೆಯನ್ನು ಸತತ ಸೇವೆ ಎಂದು ಪರಿಗಣಿಸಿ ಆರ್ಥಿಕ ಹಾಗೂ ಇನ್ನಿತರ ಸೌಲಭ್ಯ ನೀಡಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.