ಮಧು ಬಂಗಾರಪ್ಪ
ರಾಮನಗರ: ‘ಪಹಲ್ಗಾಮ್ ಘಟನೆಯಲ್ಲೂ ಅಮಾಯಕರು ಸತ್ತಿರಲಿಲ್ಲವೇ? ಅದೂ ಕೇಂದ್ರ ಸರ್ಕಾರದ ವೈಫಲ್ಯವಲ್ಲವೇ? ಅದಕ್ಕೆ ಸಂಬಂಧಿಸಿದಂತೆ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಯಾಕೆ ರಾಜೀನಾಮೆ ಕೇಳಲಿಲ್ಲ? ದುರಂತದಲ್ಲೂ ರಾಜಕೀಯ ಮಾಡುವುದು ಬಿಜೆಪಿಯ ಕೆಟ್ಟ ಚಾಳಿ’ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಿಡಿಕಾರಿದರು.
‘ಆರ್‌ಸಿಬಿ ವಿಜಯೋತ್ಸವದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಸರ್ಕಾರವೇ ಹೊಣೆ’ ಎಂಬ ವಿರೋಧ ಪಕ್ಷಗಳ ವಾಗ್ದಾಳಿ ಕುರಿತು ತಾಲ್ಲೂಕಿನ ಜಾಲಮಂಗಲದಲ್ಲಿ ಶುಕ್ರವಾರ ಸುದ್ದಿಗಾರರಿಗೆ ಅವರು ಪ್ರತಿಕ್ರಿಯಿಸಿದರು.
‘ಕಾಲ್ತುಳಿತದ ದುರಂತವನ್ನು ಪಹಲ್ಗಾಮ್ ಘಟನೆಗೆ ಹೋಲಿಸಲಾರೆ. ಆದರೆ, ದುರಂತಕ್ಕೆ ಸಂಬಂಧಿಸಿದಂತೆ ನಮಗೆ ಪ್ರಶ್ನೆ ಕೇಳುವ ಬಿಜೆಪಿಯವರು, 'ಆಪರೇಷನ್ ಸಿಂಧೂರ' ಯಾಕೆ ನಿಲ್ಲಿಸಿದರು ಎಂಬ ಪ್ರಶ್ನೆಗೆ ಇಲ್ಲಿಯವರೆಗೆ ಉತ್ತರ ಕೊಟ್ಟಿದ್ದಾರಾ?’ ಎಂದು ಪ್ರಶ್ನಿಸಿದರು.
‘ಕಾಲ್ತುಳಿತಕ್ಕೆ ಮುಂಚೆ ಬಿಜೆಪಿಯವರು ಏನೇನು ಟ್ವೀಟ್ ಮಾಡಿದ್ದಾರೆಂದು ಗೊತ್ತಿದೆ. ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಚರ್ಚಿಸಿ ಕೆಲವರ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೂ ಆದೇಶಿಸಿದ್ದಾರೆ. ಕಾನೂನು ಪ್ರಕಾರ ಏನಾಗಬೇಕೊ ಆಗಲಿದೆ’ ಎಂದರು.
‘ಮಾತೆತ್ತಿದರೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಕೇಳುವ ಬಿಜೆಪಿ ಮತ್ತು ಜೆಡಿಎಸ್‌ನವರು ತಲೆ ಇಲ್ಲದೆ ಮಾತನಾಡುತ್ತಿದ್ದಾರೆ. ಅವರಿಗೆ ಕಾಮನ್ ಸೆನ್ಸ್ ಇಲ್ಲ. ಇದೇ ಕಾರಣಕ್ಕೆ ಅಧಿಕಾರ ಕಳೆದುಕೊಂಡು ವಿರೋಧ ಪಕ್ಷದಲ್ಲಿ ಕುಳಿತಿದ್ದಾರೆ. ಕಾಲ್ತುಳಿತ ಸಂಭವಿಸಬಾರದಿತ್ತು. ಮುಂದೆ ಇಂತಹ ಘಟನೆ ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಲಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.