ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಒಂದು ಬಾರಿಗೆ ಅನ್ವಯಿಸುವಂತೆ ಒಂದೇ ಸ್ಥಳದಲ್ಲಿ ಐದು ವರ್ಷಕ್ಕಿಂತ ಹೆಚ್ಚು ಕರ್ತವ್ಯ ನಿರ್ವಹಿಸಿದ ಎಲ್ಲ ಪಂಚಾಯಿತಿ ಅಧಿಕಾರಿಗಳನ್ನು ಕೌನ್ಸೆಲಿಂಗ್ ಮೂಲಕ ಕಡ್ಡಾಯವಾಗಿ ವರ್ಗಾವಣೆ ಮಾಡುವ ಪ್ರಕ್ರಿಯೆಗೆ ಇದೇ 10 ರಂದು ಚಾಲನೆ ನೀಡಲಾಗುವುದು ಎಂದು ಇಲಾಖಾ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮೊದಲ ಹಂತದ ಪ್ರಕ್ರಿಯೆ ಇದೇ 20 ರವರೆಗೆ ನಡೆಯಲಿದೆ ಎಂದೂ ಅವರು ಹೇಳಿದ್ದಾರೆ.
ಅಲ್ಲದೇ, ಸೆ.23 ಮತ್ತು 24 ರಂದು ಸಾಮಾನ್ಯ ಕೋರಿಕೆ ವರ್ಗಾವಣೆಯ ಕೌನ್ಸೆಲಿಂಗ್ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಹಿರಿಯ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ದಿ ಆಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ದಿ ಸಹಾಯಕ (ಗ್ರೇಡ್-1 ಮತ್ತು ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) ನಿಯಮ 2024 ಅನ್ನು ರಚಿಸಿ, ಅಧಿಸೂಚನೆ ಹೊರಡಿಸಲಾಗಿದೆ. ಈ ನಿಯಮಗಳಿಗೆ ಸೂಕ್ತ ತಿದ್ದುಪಡಿಗಳನ್ನು ತಂದು, ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಕೌನ್ಸೆಲಿಂಗ್ ಮೂಲಕ ಕಡ್ಡಾಯವಾಗಿ ವರ್ಗಾವಣೆಗೊಳಿಸಲು ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.
‘ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆನ್‌ಲೈನ್ ಮೂಲಕ ವಿಶೇಷ ಪ್ರಕರಣಗಳ ಅಡಿ 515 ಅರ್ಜಿಗಳು ಹಾಗೂ ಸಾಮಾನ್ಯ ಕೋರಿಕೆಯ ಅಡಿಯಲ್ಲಿ 1,215 ಅರ್ಜಿಗಳು ಸೇರಿ ಒಟ್ಟು 1,730 ಅರ್ಜಿಗಳು ಸ್ವೀಕೃತವಾಗಿವೆ’ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.