ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳು ಕಾಗದ ರಹಿತವಾಗಿ ಕಾರ್ಯನಿರ್ವಹಿಸುವ ಮತ್ತು ಆನ್‌ಲೈನ್ ಮೂಲಕವೇ ಎಲ್ಲ ಕಡತಗಳನ್ನು ‘ಇ– ಆಫೀಸ್’ಗೆ ಕಳುಹಿಸುವ ಡಿಜಿಟಲ್ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ವಿಕಾಸಸೌಧದಲ್ಲಿ ಗುರುವಾರ ವಿವಿಧ ಜಿಲ್ಲಾಧಿಕಾರಿಗಳ ಜತೆ ವಿಡಿಯೊ ಸಂವಾದದ ಮೂಲಕ ಪ್ರಗತಿ ಪರಿಶೀಲನೆ ನಡಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಎಲ್ಲ ಗ್ರಾಮ ಆಡಳಿತಾಧಿಕಾರಿಗಳಿಗೂ ಗ್ರಾಮ ಪಂಚಾಯಿತಿ ಕಟ್ಟಡಗಳಲ್ಲಿ ಕಚೇರಿ ವ್ಯವಸ್ಥೆ ಮಾಡಲಾಗುತ್ತಿದೆ. ಬಹುತೇಕ ಕಡೆಗಳಲ್ಲಿ ಕಚೇರಿ ವ್ಯವಸ್ಥೆ ಇಲ್ಲ. ಅಲ್ಲದೇ, 4,000 ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಗಿದೆ. ಅವುಗಳಿಗೆ ಅಗತ್ಯವಿರುವ ಆ್ಯಪ್‌ಗಳನ್ನೂ ಅಳವಡಿಸಲಾಗಿದೆ. ಎಲ್ಲ ಕಡತಗಳೂ ತ್ವರಿತಗತಿಯಲ್ಲಿ ವಿಲೇವಾರಿ ಆಗಬೇಕು. ಇದರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಕೆಲಸದ ಹೊರೆಯೂ ಕಡಿಮೆ ಆಗುತ್ತದೆ. ಟಪಾಲ್ ವ್ಯವಸ್ಥೆ ಕೊನೆಗೊಳ್ಳುತ್ತದೆ ಎಂದು ಅವರು ಹೇಳಿದರು.
ಈಗಾಗಲೇ ಆನ್‌ಲೈನ್ ಮೂಲಕ ಕಾರ್ಯ ನಿರ್ವಹಿಸುವ ಮತ್ತು ಡಿಜಿಟಲ್ ರೂಪದಲ್ಲಿ ಕಡತಗಳನ್ನು ಕಳುಹಿಸುವ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಆರಂಭಿಸಲಾಗಿದೆ. ಸುಮಾರು 300ರಿಂದ 400 ಗ್ರಾಮ ಆಡಳಿತಾಧಿಕಾರಿಗಳು ಪ್ರತಿದಿನ ಲ್ಯಾಪ್‌ಟಾಪ್ ಮೂಲಕ ಕಡತಗಳನ್ನು ಕಳುಹಿಸುತ್ತಿದ್ದಾರೆ. ಎಲ್ಲ ಗ್ರಾಮ ಆಡಳಿತಾಧಿಕಾರಿಗಳನ್ನೂ ಇ–ಆಫೀಸ್ ಜಾಲದ ವ್ಯಾಪ್ತಿಗೆ ಸೇರಿಸಲಾಗುವುದು ಎಂದು ಕೃಷ್ಣಬೈರೇಗೌಡ ವಿವರಿಸಿದರು.
ಗ್ರಾಮ ಆಡಳಿತಾಧಿಕಾರಿಗಳಿಗೆ ಕಚೇರಿ ವ್ಯವಸ್ಥೆ ಮಾಡಿಕೊಡುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಕಳೆದ ಒಂದು ತಿಂಗಳಲ್ಲಿ 2,600 ಕಡೆಗಳಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಗೆ ಕಚೇರಿ ವ್ಯವಸ್ಥೆ ಮಾಡಲಾಗಿದೆ. ಉಳಿದ 3,500 ಅಧಿಕಾರಿಗಳಿಗೂ ಶೀಘ್ರದಲ್ಲೇ ಕಚೇರಿ ವ್ಯವಸ್ಥೆ ಆಗಲಿದೆ ಎಂದು ತಿಳಿಸಿದರು.
‘ನನ್ನ ಭೂಮಿ ಗ್ಯಾರಂಟಿ’ ಅಭಿಯಾನಕ್ಕೆ ವೇಗ ನೀಡಲಾಗಿದೆ. ಕೇವಲ 7 ತಿಂಗಳಲ್ಲಿ 1,04,222 ಜಮೀನುಗಳ ಅಳತೆ ಮಾಡುವ ಪ್ರಕ್ರಿಯೆ ಕೈಗೆತ್ತಿಕೊಳ್ಳಲಾಗಿದೆ. ಇದರಲ್ಲಿ ಶೇ 20ರಷ್ಟು ಭೂಮಿಯ ಅಳತೆ ಕೆಲಸವೂ ಮುಗಿದಿದೆ. ಉಳಿದ ಪ್ರಕರಣಗಳನ್ನು ಮುಂದಿನ ಆರು ತಿಂಗಳಲ್ಲಿ ಪೋಡಿ ಮಾಡಿಕೊಡಲು ಸೂಚಿಸಲಾಗಿದೆ. ಅಲ್ಲದೆ, ಇನ್ನೂ 50 ಸಾವಿರದಿಂದ 70 ಸಾವಿರ ಪೋಡಿ ಪ್ರಕರಣಗಳು ದಾಖಲಾಗುವ ನಿರೀಕ್ಷೆ ಇದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಮೂರು ವರ್ಷಗಳಲ್ಲಿ 5,801 ಪ್ರಕರಣಗಳಲ್ಲಿ ಮಾತ್ರ ರೈತರಿಗೆ ಪೋಡಿ ದುರಸ್ತಿ ಮಾಡಿಕೊಡಲಾಗಿತ್ತು ಎಂದರು.
29.8 ಕೋಟಿ ಪುಟಗಳ ಡಿಜಿಟಲೀಕರಣ:
‘ಭೂ ಸುರಕ್ಷಾ’ ಯೋಜನೆಯಡಿ ‘ಎ’ ಮತ್ತು ‘ಬಿ’ ಕೆಟಗರಿಯ ಮೂಲ ದಾಖಲೆಗಳನ್ನು ಸ್ಕ್ಯಾನ್ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಸುಮಾರು 100 ಕೋಟಿ ಪುಟಗಳಷ್ಟು ಸ್ಕ್ಯಾನ್ ಮಾಡಬೇಕಾಗಿದ್ದು, ಈವರೆಗೆ 29.8 ಕೋಟಿ ಪುಟಗಳನ್ನು ಸ್ಕ್ಯಾನ್ ಮಾಡಲಾಗಿದೆ. ಈ ವರ್ಷದ ಕೊನೆಯ ಒಳಗೆ ತಹಶೀಲ್ದಾರ್ ಕಚೇರಿಗಳಲ್ಲಿರುವ ಎಲ್ಲಾ ಮೂಲ ಕಡತಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲಾಗುವುದು ಎಂದು ಕೃಷ್ಣಬೈರೇಗೌಡ ತಿಳಿಸಿದರು.
ಭೂಸುರಕ್ಷಾ ಯೋಜನೆಯಿಂದಾಗಿ ಭೂದಾಖಲೆಗಳ ಅಕ್ರಮ ನಡೆಯುವುದನ್ನು ತಡೆಯಬಹುದು. ಮನೆಯಲ್ಲೇ ಕುಳಿತು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿ, ಪ್ರಮಾಣೀಕೃತ ಡಿಜಿಟಲ್ ಸಹಿ ಹೊಂದಿರುವ ದಾಖಲೆಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಹೇಳಿದರು.
1,04,222 ಜಮೀನುಗಳ ಪೋಡಿ ದುರಸ್ತಿ
100 ಕೋಟಿ ಪುಟಗಳ ಪೈಕಿ 29.8 ಕೋಟಿ ಪುಟ ಡಿಜಿಟಲೀಕರಣ
ಗ್ರಾಮ ಆಡಳಿತ ಅಧಿಕಾರಿಗಳಿಗೆ ಕಚೇರಿ ಮತ್ತು ಲ್ಯಾಪ್‌ಟಾಪ್
ಸಮರ್ಪಕವಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳಿಗೆ ಚಾಟಿ ಬೀಸಿ ಕೆಲಸ ಮಾಡಿಸಬೇಕಾಗುತ್ತದೆ. ನಿರ್ಲಕ್ಷ್ಯ ಮತ್ತು ನಿಧಾನಗತಿಯನ್ನು ಸಹಿಸುವುದಿಲ್ಲಕೃಷ್ಣ ಬೈರೇಗೌಡ ಕಂದಾಯ ಸಚಿವ
ಜುಲೈ 15ರ ಬಳಿಕ ಹೆಚ್ಚು ಮಳೆ
ಜುಲೈ 15ರ ಬಳಿಕ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು ಆದ್ದರಿಂದ ಮಲೆನಾಡು ಕರಾವಳಿ ಮತ್ತು ಕೃಷ್ಣಾ ಕಣಿವೆ ಭಾಗದ ಪ್ರದೇಶಗಳಿಗೆ ಕಟ್ಟೆಚ್ಚರ ನೀಡಲಾಗಿದೆ ಎಂದು ಕೃಷ್ಣಬೈರೇಗೌಡ ತಿಳಿದರು. ಜುಲೈ ಮತ್ತು ಆಗಸ್ಟ್‌ನಲ್ಲಿ ಮಳೆಯಿಂದ ಯಾವುದೇ ಪರಿಸ್ಥಿತಿ ಉದ್ಭವಿಸಿದರೂ ಅದನ್ನು ನಿಭಾಯಿಸಲು ಸಜ್ಜಾಗಿರುವಂತೆ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್‌ಗಳಿಗೆ ಸೂಚನೆ ನೀಡಲಾಗಿದೆ. ಜೂನ್‌ನಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ವಾಡಿಕೆಗಿಂತ ಶೇ 40ರಿಂದ ಶೇ 50ರಷ್ಟು ಹೆಚ್ಚು ಮಳೆಯಾಗಿದೆ. ಬಯಲುಸೀಮೆ ಪ್ರದೇಶದಲ್ಲಿ ಕೆಲವು ಕಡೆಗಳಲ್ಲಿ ವಾಡಿಕೆಗಿಂತ ಶೇ 2ರಿಂದ ಶೇ 3ರಷ್ಟು ಹೆಚ್ಚು ಇನ್ನೂ ಕೆಲವುಗಳಲ್ಲಿ ಕಡಿಮೆ ಮಳೆಯಾಗಿದೆ. ಹಾನಿ ಆದ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.