ಡಿ.ಕೆ. ಶಿವಕುಮಾರ್
ಬೆಂಗಳೂರು: ‘ಪಕ್ಷದ ಬ್ಲಾಕ್ ಸಮಿತಿಯಲ್ಲಿ ಸಕ್ರಿಯವಾಗಿ ಕೆಲಸ ಮಾಡದವರನ್ನು ಬದಲಿಸಲು ನಿರ್ಧರಿಸಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಜಿಲ್ಲಾ ಮತ್ತು ಬ್ಲಾಕ್ ಘಟಕಗಳ ಅಧ್ಯಕ್ಷರ ಜೊತೆ ಶನಿವಾರ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬ್ಲಾಕ್ ಮಟ್ಟದಲ್ಲಿ ಪಕ್ಷದ ಸಮಿತಿಗಳನ್ನು ಪುನರ್ ರಚನೆ ಮಾಡಬೇಕಿದೆ. ಹಾಲಿ ಅಧ್ಯಕ್ಷರು ಹಲವು ವರ್ಷಗಳಿಂದ ಪಕ್ಷಕ್ಕೆ ದುಡಿದಿದ್ದಾರೆ. ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕಿದೆ. ಕೆಲವರಿಗೆ ಬಡ್ತಿ ನೀಡಬೇಕು. ಇನ್ನೂ ಕೆಲವರಿಗೆ ಜವಾಬ್ದಾರಿ ನೀಡಬೇಕಿದೆ’ ಎಂದರು.
‘ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗೆ ನ್ಯಾಯಾಲಯ ಯಾವಾಗ ಬೇಕಾದರೂ ಸೂಚನೆ ನೀಡಬಹುದು. ಆ ಚುನಾವಣೆಗಳಿಗೆ ತಯಾರಿ ಮಾಡಿಕೊಳ್ಳಬೇಕಿದೆ. ಪಕ್ಷದ ಸಮಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಬೇಕಿದೆ. ಈ ಎಲ್ಲ ವಿಚಾರಗಳನ್ನು ಚರ್ಚಿಸಿ, ಮಾರ್ಗದರ್ಶನ ನೀಡಲು ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ಅಧ್ಯಕ್ಷರ ಸಭೆ ನಡೆಸಲಾಗಿದೆ’ ಎಂದರು.
‘ಇತ್ತೀಚೆಗೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲೂ ಈ ವಿಚಾರವನ್ನು ಹೇಳಿದ್ದೇನೆ. ಶಾಸಕರು ತಮ್ಮ ಮನೆಯಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಬಹುದು. ಆದರೆ, ಪಕ್ಷದ ಸಭೆಗಳು ಪಕ್ಷದ ಕಚೇರಿಯಲ್ಲೇ ನಡೆಯಬೇಕು. ಈ ಕಾರಣಕ್ಕೆ ತಾಲ್ಲೂಕು ಮಟ್ಟದಲ್ಲಿ ಕಾಂಗ್ರೆಸ್ ಕಚೇರಿ ಕಡ್ಡಾಯವಾಗಿ ಇರಬೇಕು ಎಂದು ಸೂಚನೆ ನೀಡಲಾಗಿದೆ. ಅಧಿವೇಶನ ಮುಗಿದ ಬಳಿಕ ತಲಾ ಇಬ್ಬರು ಸಚಿವರು ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ’ ಎಂದರು.
ರೈತರ ಹಿತ ರಕ್ಷಣೆ ಸಾಧ್ಯವಾಗಿದೆ: ‘ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ವರುಣ ದೇವನ ಕೃಪೆಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕೋರ್ಟ್ ಆದೇಶ ಪಾಲನೆ ಹಾಗೂ ರೈತರ ಹಿತರಕ್ಷಣೆ ಸಾಧ್ಯವಾಗುತ್ತಿದೆ’ ಎಂದು ಶಿವಕುಮಾರ್ ಹೇಳಿದರು.
‘2–3 ದಿನಗಳಲ್ಲಿ ಕೆಆರ್‌ಎಸ್ ಅಣೆಕಟ್ಟು ತುಂಬುವ ನಿರೀಕ್ಷೆಯಿದೆ. ತಮಿಳುನಾಡಿನ ಪಾಲಿನ ನೀರನ್ನು ಬಿಡುಗಡೆ ಮಾಡಬಹುದಾದ ಸೂಚನೆ ವ್ಯಕ್ತವಾಗಿವೆ. ಇದರ ಜೊತೆಗೆ ನಮ್ಮ ರೈತರ ಹಿತಕಾಯಲು ಕೆರೆ ತುಂಬಿಸುವ ಕಾರ್ಯಕ್ಕೆ ಕ್ರಮ ಕೈಗೊಳ್ಳಲಾಗುವುದು. ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ. ಭತ್ತ ನಾಟಿ ಮಾಡುವ ಮುನ್ನ ಸ್ವಲ್ಪ ತಾಳ್ಮೆ ವಹಿಸಬೇಕು. ನೀರು ಎಷ್ಟು ಪ್ರಮಾಣದಲ್ಲಿ ಬರಲಿದೆ ಎಂಬುದು ಇನ್ನೂ ತಿಳಿದಿಲ್ಲ. ಹೀಗಾಗಿ ಕೃಷಿ ಇಲಾಖೆಯವರ ಜತೆ ಚರ್ಚಿಸಿ, ತೀರ್ಮಾನಿಸಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.