ಸಾಂದರ್ಭಿಕ-ಚಿತ್ರ
ಎ.ಐ ಚಿತ್ರ
ಬೆಂಗಳೂರು: ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕು ಮಿಡಿಗೇಶಿಯ ರೈತರೊಬ್ಬರ ಜಮೀನಿನಲ್ಲಿ 19 ನವಿಲುಗಳು ಮೃತಪಟ್ಟ ಪ್ರಕರಣದ ತನಿಖೆಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ನೇತೃತ್ವದ ತಂಡ ನಡೆಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನವಿಲುಗಳ ಸಾವಿನ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸಾವಿಗೆ ಕೀಟನಾಶಕ ಸೇವನೆ ಕಾರಣ ಎಂಬ ಅಂಶ ಮಾಧ್ಯಮಗಳಲ್ಲಿ ವರದಿಯಾಗಿದೆ. ನವಿಲುಗಳನ್ನು ಸಾಯಿಸಲೆಂದೇ ವಿಷ ಹಾಕಲಾಗಿತ್ತೆ ಅಥವಾ ಬೆಳೆಗಳಿಗೆ ಸಿಂಪಡಿಸಿದ ಕೀಟನಾಶಕಯುಕ್ತ ಫಸಲು ತಿಂದು ನವಿಲುಗಳು ಮೃತಪಟ್ಟಿವೆಯೇ ಎಂಬ ಬಗ್ಗೆ ತನಿಖೆ ನಡೆಸಿ, ಐದು ದಿನಗಳಲ್ಲಿ ವರದಿ ಸಲ್ಲಿಸಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಲಾಗಿದೆ’ ಎಂದರು.
‘ಮಲೆಮಹದೇಶ್ವರ ಬೆಟ್ಟದಲ್ಲಿ ಈಚೆಗೆ ಹುಲಿ ಮತ್ತು ಅದರ ನಾಲ್ಕು ಮರಿಗಳು ವಿಷ ಸೇವನೆಯಿಂದ ಮೃತಪಟ್ಟಿದ್ದವು. ನಂತರ ಕೋತಿಗಳನ್ನು ಕೊಂದು ಬಂಡೀಪುರದ ಬಳಿ ಎಸೆದಿದ್ದರು. ಯಾವುದೇ ವನ್ಯಜೀವಿ ಮೃತಪಟ್ಟರೂ ‘ಆಡಿಟ್’ ಮಾಡಿಸಬೇಕು, ತಕ್ಷಣ ಸಚಿವರ ಕಾರ್ಯಾಲಯಕ್ಕೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.