ADVERTISEMENT

72 ಗಂಟೆಗಳಲ್ಲಿ ಮನೆ ಬಾಗಿಲಿಗೆ ಪಿಂಚಣಿ: ಆರ್. ಅಶೋಕ್

ಕಂದಾಯ ಸಚಿವ ಆರ್. ಅಶೋಕ್

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2022, 18:54 IST
Last Updated 30 ಮಾರ್ಚ್ 2022, 18:54 IST
   

ಬೆಂಗಳೂರು: ‘ಹಲೋ ಕಂದಾಯ ಸಚಿವರೇ ಎಂದು ಸಹಾಯವಾಣಿಗೆ ಕರೆ ಮಾಡಿದರೆ 72 ಗಂಟೆಗಳಲ್ಲಿ ಮನೆ ಬಾಗಿಲಿಗೆ ಪಿಂಚಣಿ ಮಂಜೂರಾತಿ ಪತ್ರ ತಲುಪಿಸುವ ವಿನೂತನ ಯೋಜನೆ ಜಾರಿಗೊಳಿಸಲಾಗುತ್ತಿದೆ’ ಎಂದು ಕಂದಾಯ ಸಚಿವ ಆರ್. ಅಶೋಕ್ ಘೋಷಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಬುಧವಾರ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಪಿ.ಎಂ. ಮುನಿರಾಜುಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ರಾಜ್ಯದಲ್ಲಿ ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ವಿವಿಧ ಮಾಸಾಶನ ಯೋಜನೆಗಳು ಸಕಾಲಕ್ಕೆ ತಲುಪುತ್ತಿಲ್ಲ ಎನ್ನುವ ದೂರುಗಳಿವೆ. ಈ ವ್ಯವಸ್ಥೆಯನ್ನು ಸುಧಾರಿಸಲು ಈ ಕ್ರಮಕೈಗೊಳ್ಳಲಾಗುತ್ತಿದೆ’ ಎಂದು ವಿವರಿಸಿದರು.

‘ಈ ಯೋಜನೆಗಾಗಿ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಲಾಗುತ್ತಿದೆ. ಇದಕ್ಕಾಗಿ ಪ್ರತ್ಯೇಕ ನಿಯಂತ್ರಣ ಕೊಠಡಿಯನ್ನು ಆರಂಭಿಸಲಾಗುವುದು. ಕರ್ನಾಟಕದ ಯಾವುದೇ ಮೂಲೆಯಿಂದ ಕರೆ ಮಾಡಿದರೂ ಅವರಿಗೆ 72 ಗಂಟೆಗಳಲ್ಲಿ ಪಿಂಚಣಿ ಸೌಲಭ್ಯ ದೊರೆಯಲಿದೆ’ ಎಂದು ವಿವರಿಸಿದರು.

ADVERTISEMENT

‘ರಾಜ್ಯದಲ್ಲಿ ಆರಂಭಿಸಲಾದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ದೊರೆತಿದೆ. ಅಲ್ಲಿ ದೊರೆತ ಅನುಭವದಿಂದ ಮನೆ ಬಾಗಿಲಿಗೆ ದಾಖಲೆಗಳನ್ನು ತಲುಪಿಸುವ ಯೋಜನೆ ರೂಪಿಸಲಾಗಿತ್ತು. ಈಗ ಮನೆ ಬಾಗಿಲಿಗೆ ಪಿಂಚಣಿ ಸೌಲಭ್ಯವನ್ನು ಮನೆ ಬಾಗಿಲಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.