ಬೆಂಗಳೂರು: ‘ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಲಿತರಿಗೆ ಅನ್ಯಾಯ ಮಾಡಿದ್ದಾರೆ. ಈ ಅನ್ಯಾಯದ ವಿರುದ್ಧ ಜನಾಂದೋಲನ ನಡೆಸುತ್ತೇವೆ. ಬೆಂಗಳೂರಿನಲ್ಲಿ 5 ಲಕ್ಷ ಜನ ಸೇರಿಸಿ, ಸರ್ಕಾರದ ಈ ನೀತಿಯ ವಿರುದ್ಧ ಸಮಾವೇಶ ನಡೆಸುತ್ತೇವೆ’ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಶಾಸಕರ ಭವನದಲ್ಲಿ ಶನಿವಾರ ಆಯೋಜಿಸಿದ್ದ ಬಿಜೆಪಿಯ ದಲಿತ ನಾಯಕರ ಸಭೆಯಲ್ಲಿ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆಯ (ಎಸ್‌ಸಿಎಸ್‌ಪಿ, ಟಿಎಸ್‌ಪಿ) ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿಕೊಳ್ಳಲು ಅವಕಾಶ ಮಾಡಿಕೊಂಡಿದ್ದಾರೆ. ಇದರ ವಿರುದ್ಧ ಹೋರಾಡದೆ ವಿಧಿಯಿಲ್ಲ’ ಎಂದರು. ಸಭೆಯಲ್ಲಿ ಇದಕ್ಕೆ ಒಮ್ಮತ ವ್ಯಕ್ತವಾಯಿತು.
ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬೆಂಗಳೂರಿನಲ್ಲಿ ಸಮಾವೇಶ ನಡೆಸಬೇಕು ಎಂದು ತೀರ್ಮಾನಿಸಲಾಗಿದೆ. ಈ ಸಂಬಂಧ ರಾಜ್ಯದಾದ್ಯಂತ ಪ್ರವಾಸ ನಡೆಸಿ, ಜನರನ್ನು ಒಗ್ಗೂಡಿಬೇಕಿದೆ. ಇದಕ್ಕಾಗಿ ದಲಿತ ಸಂಘಟನೆಗಳ 10 ತಂಡಗಳನ್ನು ರಚಿಸಲಿದ್ದೇವೆ’ ಎಂದರು.
‘ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯನ್ನು ಸರ್ಕಾರ ಉಲ್ಲಂಘಿಸಿದೆ. ಇದರ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡಲಿದ್ದೇವೆ. ಕಾನೂನು ಹೋರಾಟ ನಡೆಸಿ, ಸರ್ಕಾರವನ್ನು ಕಟಕಟೆಗೆ ತಂದು ನಿಲ್ಲಿಸಲಿದ್ದೇವೆ. ದಲಿತರಿಗೆ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಏನನ್ನೂ ನೀಡಿಲ್ಲ. ಈ ಮೂಲಕ ತಾನು ದಲಿತ ವಿರೋಧಿ ಎಂಬುದನ್ನು ಸಾಬೀತು ಮಾಡಿದ್ದಾರೆ’ ಎಂದರು.
ಬಿಜೆಪಿ ಸಂಸದ ಗೋವಿಂದ ಕಾರಜೋಳ, ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎನ್.ಮಹೇಶ್ ಮತ್ತು ಸಮತಾ ಸೈನಿಕ ದಳದ ಅಧ್ಯಕ್ಷ ಎಂ. ವೆಂಕಟಸ್ವಾಮಿ ಸಭೆಯಲ್ಲಿ ಭಾಗವಹಿಸಿದ್ದರು.
ಸಿದ್ದರಾಮಯ್ಯ ಅವರು ದಲಿತರ ವಿರುದ್ಧ ದಲಿತರನ್ನೇ ಎತ್ತಿಕಟ್ಟುತ್ತಿದ್ದಾರೆ. ಈ ಮೂಲಕ ದಲಿತ ಸಮುದಾಯಗಳ ಒಗ್ಗಟ್ಟನ್ನು ಒಡೆಯುತ್ತಿದ್ದಾರೆಛಲವಾದಿ ನಾರಾಯಣಸ್ವಾಮಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ
ಸಿದ್ದರಾಮಯ್ಯ ಅವರು ಮೋಸಗಾರ. ದಲಿತರಿಗೆ ಎಸ್‌ಸಿಎಸ್‌ಪಿ ಟಿಎಸ್‌ಪಿ ಅಡಿ ತೋರಿಸೋದು ₹42000 ಕೋಟಿ. ಕೊಡೋದು ₹7500 ಕೋಟಿ ಮಾತ್ರ ಗೋವಿಂದ ಕಾರಜೋಳ ಬಿಜೆಪಿ ಸಂಸದ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.