ಬೆಂಗಳೂರು: ‘ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಲು ರಾಜ್ಯ ಸರ್ಕಾರದಿಂದ ಅನುಮತಿ ಪಡೆದಿರಬೇಕು. ಯಾವುದೇ ಕಾರಣಕ್ಕೂ ರಸ್ತೆ ನಿರ್ಬಂಧಿಸಿ ಪ್ರತಿಭಟಿಸುವಂತಿಲ್ಲ. ಅನುಮತಿ ನೀಡಿರುವ ನಿರ್ದಿಷ್ಟ ಸ್ಥಳದಲ್ಲಿ ಮಾತ್ರವೇ ಪ್ರತಿಭಟನೆ ನಡೆಸಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ.
‘ಇದೇ 18ರಂದು ಮಧ್ಯಾಹ್ನ 12ರಿಂದ ರಾತ್ರಿ 9ರವರೆಗೆ ರಾಷ್ಟ್ರೀಯ ಹೆದ್ದಾರಿ 72ರಲ್ಲಿ ಮಂಗಳೂರಿನಿಂದ ಪಡೀಲ್ ಮಾರ್ಗವಾಗಿ ಬಿ.ಸಿ.ರೋಡ್‌ಗೆ ಸಂಚಾರ ನಿರ್ಬಂಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಹೊರಡಿಸಿರುವ ಸುತ್ತೋಲೆ ರದ್ದುಗೊಳಿಸಬೇಕು’ ಎಂದು ಪ್ರಶ್ನಿಸಿ ದಕ್ಷಿಣ ಕನ್ನಡ ಜಿಲ್ಲೆ ಫರಂಗಿಪೇಟೆಯ ಎ.ರಾಜೇಶ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಡಿ.ಆರ್.ರವಿಶಂಕರ್, ‘ಉದ್ದೇಶಿತ ಪ್ರತಿಭಟನೆಗೆ ರಾಜ್ಯ ಸರ್ಕಾರವೇ ಅನುಮತಿ ನೀಡುತ್ತಿದೆ’ ಎಂದು ಆಕ್ಷೇಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಅನುಮತಿ ಇಲ್ಲದೇ ಹೋದರೆ ಪ್ರತಿಭಟನೆ ನಡೆಸುವಂತಿಲ್ಲ. ಅಂತೆಯೇ, ಸರ್ಕಾರ ಪ್ರತಿಭಟನೆ ನಡೆಸಲು ಅನುಮತಿ ನೀಡುವುದಕ್ಕೂ ಮುನ್ನ ಈ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯ ಹಂತದಲ್ಲಿದೆ ಎಂಬುದನ್ನು ಗಮನದಲ್ಲಿ ಇರಿಕೊಳ್ಳಬೇಕು’ ಎಂದು ಎಚ್ಚರಿಸಿದೆ.
10 ವರ್ಷ ಸೇವೆ: ಕಾಯಾಮಾತಿಗೆ ಅರ್ಹತೆ
ಬೆಂಗಳೂರು: ದಿನಗೂಲಿ ಆಧಾರದಲ್ಲಿ ಸತತ 30 ವರ್ಷಗಳ ಕಾಲ ಅರಣ್ಯ ವೀಕ್ಷಕ ಮತ್ತು ಚಾಲಕನಾಗಿ ಕಾರ್ಯನಿರ್ವಹಿಸಿದ್ದ ದಿನಗೂಲಿ ನೌಕರರೊಬ್ಬರ ಸೇವೆಯನ್ನು ಕಾಯಂಗೊಳಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಿರುವ ಹೈಕೋರ್ಟ್, ‘ಮಂಜೂರಾತಿ ಹುದ್ದೆಯಲ್ಲಿ 10 ವರ್ಷಗಳ ಕಾಲ ನಿರಂತರವಾಗಿ ಕೆಲಸ ಮಾಡಿದ ಉದ್ಯೋಗಿಯು ಸೇವೆಯ ಕಾಯಮಾತಿಗೆ ಅರ್ಹನಾಗಿರುತ್ತಾನೆ’ ಎಂದು ಸ್ಪಷ್ಟಪಡಿಸಿದೆ.
‘ಸೇವೆ ಕಾಯಂಗೊಳಿಸಲು ನಿರಾಕರಿಸಿ ಅರಣ್ಯ ಇಲಾಖೆ ನೀಡಿದ್ದ ಹಿಂಬರಹ ಮತ್ತು ಈ ಹಿಂಬರಹವನ್ನು ಮಾನ್ಯ ಮಾಡಿರುವ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಆದೇಶ ರದ್ದುಪಡಿಸಬೇಕು’ ಎಂದು ಕೋರಿ ಆನೇಕಲ್ ವಲಯದ ಅರಣ್ಯ ವೀಕ್ಷಕ ಪಿ.ಜುಂಜಪ್ಪ (53) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.
‘ಮಂಜೂರಾತಿ ಹುದ್ದೆಯಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿರುವುದನ್ನು ದೃಢಪಡಿಸಲು ಅರ್ಜಿದಾರರು ಯಾವುದೇ ಔಪಚಾರಿಕ ನೇಮಕಾತಿ ಪತ್ರ ಹಾಜರುಪಡಿಸಿಲ್ಲ. ಅಂತೆಯೇ, ಅರಣ್ಯ ಇಲಾಖೆಗೆ ಸಂಬಂಧಿಸಿದ ನೇಮಕಾತಿಗಳನ್ನು ನಿಗದಿತ ಆಯ್ಕೆ ಪ್ರಕ್ರಿಯೆಯ ಮೂಲಕವೇ ನಡೆಸಬೇಕು’ ಎಂಬ ಸರ್ಕಾರದ ವಾದವನ್ನು ನ್ಯಾಯಪೀಠ ತಳ್ಳಿ ಹಾಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.