ಬೆಂಗಳೂರು: 2025–26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 422 ಸ್ನಾತಕೋತ್ತರ ಪದವಿ (ಪಿಜಿ) ಸೀಟುಗಳು ಹೆಚ್ಚಳವಾಗಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಿಜಿ ಹಂತದಲ್ಲಿ ಒಟ್ಟು 572 ಸೀಟುಗಳನ್ನು ಮಂಜೂರು ಮಾಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೆವು. ಅದರಲ್ಲಿ 422 ಸೀಟುಗಳ ಮಂಜೂರಾಗಿವೆ. ಪ್ರಿ–ಕ್ಲಿನಿಕಲ್, ಪ್ಯಾರಾ–ಕ್ಲಿನಿಕಲ್ ಮತ್ತು ಕ್ಲಿನಿಕಲ್ ವಿಭಾಗಗಳಲ್ಲಿ ಈ ಹೆಚ್ಚುವರಿ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ’ ಎಂದರು.
‘ರಾಜ್ಯಕ್ಕೆ ಈಗಾಗಲೇ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಆದೇಶಿಸಿತ್ತು. ಈಗ ಪಿಜಿ ಸೀಟುಗಳ ಸಂಖ್ಯೆಯೂ ಹೆಚ್ಚಳವಾಗಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ ದೀಪಾವಳಿಯ ಉಡುಗೊರೆ ಸಿಕ್ಕಂತಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.