ADVERTISEMENT

ಪಂಚಮಸಾಲಿಗೆ 2–ಎ ಮೀಸಲು ಆಕ್ಷೇಪಿಸಿದ ಪಿಐಎಲ್‌

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2023, 15:24 IST
Last Updated 3 ಫೆಬ್ರುವರಿ 2023, 15:24 IST
   

ಬೆಂಗಳೂರು: ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎಗೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಇತ್ತೀಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ರಾಜ್ಯ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದೆ.

ಈ ಸಂಬಂಧ ಬೆಂಗಳೂರಿನ ಜ್ಞಾನಭಾರತಿಯ ಮೃತ್ಯುಂಜಯ ನಗರದ ನಿವಾಸಿ ಡಿ.ಜಿ ರಾಘವೇಂದ್ರ ಬಿನ್ ಸೂರ್ಯ ದೇವಾಡಿಗ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ಮಧ್ಯಂತರ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದರು. ಅಂತೆಯೇ, ಆಕ್ಷೇಪಣೆ ಸಲ್ಲಿಸಲು ಎರಡು ವಾರಗಳ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.

ADVERTISEMENT

ಇದೇ ವೇಳೆ ಅರ್ಜಿದಾರರ ಪರ ವಕೀಲ ಎಚ್‌.ವಿ.ಮಂಜುನಾಥ್‌ ವರದಿಯ ಪ್ರತಿಯನ್ನು ತಮಗೂ ನೀಡುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು. ಆದರೆ, ನ್ಯಾಯಪೀಠ, ‘ಇದು ಮುಚ್ಚಿದ ಲಕೋಟೆಯಲ್ಲಿದೆ. ಮೊದಲು ನಾವು ಪರಿಶೀಲಿಸುತ್ತೇವೆ, ಆಮೇಲೆ ನೋಡೋಣ’ ಎಂದು ಪ್ರತಿಕ್ರಿಯಿಸಿತು.

ಅಡ್ವೊಕೇಟ್‌ ಜನರಲ್‌ ಅವರ ಮನವಿಯನ್ನು ಪರಿಗಣಿಸಿದ ನ್ಯಾಯಪೀಠ, ‘2022ರ ಡಿಸೆಂಬರ್ 27ರಂದು ನ್ಯಾಯಾಲಯ ನೀಡಿದ್ದ ನಿರ್ದೇಶನದಂತೆ ಮಧ್ಯಂತರ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿದೆ’ ಎಂದು ದಾಖಲಿಸಿಕೊಂಡು, ಎರಡು ವಾರಗಳ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಥಾಸ್ಥಿತಿ ಕಾಯ್ದುಕೊಂಡು ಹೋಗುವಂತೆ ಈ ಹಿಂದೆ ಇದೇ ವಿಭಾಗೀಯ ನ್ಯಾಯಪೀಠ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.