ADVERTISEMENT

ಸುರಂಗ ರಸ್ತೆ ಟೆಂಡರ್‌ ಪ್ರಶ್ನಿಸಿ ಪಿಐಎಲ್‌: ರಾಜ್ಯ ಸರ್ಕಾರ, ಜಿಬಿಎಗೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2025, 16:12 IST
Last Updated 25 ಅಕ್ಟೋಬರ್ 2025, 16:12 IST
<div class="paragraphs"><p>ಹೈಕೋರ್ಟ್‌</p></div>

ಹೈಕೋರ್ಟ್‌

   

ಬೆಂಗಳೂರು: ‘ಹೆಬ್ಬಾಳದಿಂದ ಸಿಲ್ಕ್‌ ಬೋರ್ಡ್‌ವರೆಗೂ ಸುರಂಗ ರಸ್ತೆ ನಿರ್ಮಾಣದ ಟೆಂಡರ್ ಅಧಿಸೂಚನೆ ರದ್ದುಪಡಿಸಬೇಕು’ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ, ರಾಜ್ಯ ಸರ್ಕಾರ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ) ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ, ಚಲನಚಿತ್ರ ನಟ ಪ್ರಕಾಶ್ ಬೆಳವಾಡಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು. 

ADVERTISEMENT

ವಿಚಾರಣೆ ವೇಳೆ ಅರ್ಜಿದಾರರ ಪರ ಸಂಸದರೂ ಆದ ವಕೀಲ ತೇಜಸ್ವಿ ಸೂರ್ಯ ವಾದ ಮಂಡಿಸಿ, ‘ಉದ್ದೇಶಿತ ಸುರಂಗ ರಸ್ತೆಗಾಗಿ ನಗರದ ಶ್ವಾಸಕೋಶದಂತಿರುವ ಲಾಲ್‌ಬಾಗ್‌ ಪ್ರದೇಶದಲ್ಲಿ 6.5 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ. ಯೋಜನೆಗೆ ಸಂಬಂಧಿಸಿದಂತೆ ಹೊರಡಿಸಿರುವ ಡಿಪಿಆರ್ ಪ್ರಕಾರ 3 ಸಾವಿರ ವರ್ಷಗಳಿಂದ ನೈಸರ್ಗಿಕವಾಗಿ ರೂಪುಗೊಂಡಿರುವ ಇಲ್ಲಿನ ಬೃಹದಾಕಾರದ ಬಂಡೆಗೆ ಹಾನಿಯಾಗುವ ಸಂಭವವಿದೆ. ಯೋಜನೆಗಾಗಿ ಮರಗಳನ್ನು ಕಡಿಯುವ ಉದ್ದೇಶವೂ ಒಳಗೊಂಡಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸರ್ಕಾರದ ಪರ ವಕೀಲರಿಗೆ, ‘ಮರಗಳನ್ನು ಕಡಿಯಲಾಗುತ್ತಿದೆಯೇ ಹೇಗೆ ಎಂಬುದನ್ನು ನ್ಯಾಯಾಲಯಕ್ಕೆ ದೃಢಪಡಿಸಿ’ ಎಂದು ತಾಕೀತು ಮಾಡಿ ವಿಚಾರಣೆಯನ್ನು ಇದೇ 28ಕ್ಕೆ ಮುಂದೂಡಿತು. ಅರ್ಜಿದಾರರ ಪರ ಹೈಕೋರ್ಟ್‌ ವಕೀಲ ಅನಿರುದ್ಧ ಎ.ಕುಲಕರ್ಣಿ ವಕಾಲತ್ತು ವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.