ADVERTISEMENT

ಹಿರಿಯ ಕವಿ ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಜೂನ್ 2021, 15:26 IST
Last Updated 11 ಜೂನ್ 2021, 15:26 IST
ಹಿರಿಯ ಕವಿ ಸಿದ್ದಲಿಂಗಯ್ಯ ಮತ್ತು ಪ್ರಧಾನಿ ನರೇಂದ್ರ ಮೋದಿ
ಹಿರಿಯ ಕವಿ ಸಿದ್ದಲಿಂಗಯ್ಯ ಮತ್ತು ಪ್ರಧಾನಿ ನರೇಂದ್ರ ಮೋದಿ   

ಬೆಂಗಳೂರು: ಹಿರಿಯ ಕವಿ ಸಿದ್ದಲಿಂಗಯ್ಯ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಡಾ. ಸಿದ್ದಲಿಂಗಯ್ಯ ಅವರ ಬರಹಗಳು, ಕವನಗಳು ಮತ್ತು ಅವರು ಸಾಮಾಜಿಕ ನ್ಯಾಯಕ್ಕಾಗಿ ನೀಡಿದ ಕೊಡುಗೆ ಅಪಾರವಾದದ್ದು, ಅವರ ನಿಧನ ಸುದ್ದಿ ಬೇಸರ ತರಿಸಿದೆ. ಅಭಿಮಾನಿಗಳು ಮತ್ತು ಕುಟುಂಬಸ್ಥರಿಗೆ ಅಗಲಿಕೆಯ ನೋವು ಭರಿಸುವ ಶಕ್ತಿ ದೊರೆಯಲಿ ಓಂ ಶಾಂತಿ’ ಎಂದು ಸಂತಾಪ ಸೂಚಿಸಿದ್ದಾರೆ.

ಕೊರೊನಾ ಸೋಂಕಿತರಾಗಿದ್ದ ಕವಿ ಸಿದ್ದಲಿಂಗಯ್ಯ ಅವರು (67) ಶುಕ್ರವಾರ ಸಂಜೆ ನಿಧನರಾಗಿದ್ದಾರೆ.

ADVERTISEMENT

ಅವರಿಗೆ ಕಳೆದ ತಿಂಗಳು ಕೆಮ್ಮು ಮತ್ತು ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಮೇ 2 ರಂದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಬೆಂಗಳೂರಿನ ರಂಗದೊರೈ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ಮೇ 5ರಂದು ಹಳೆ ವಿಮಾಣ ನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಒದಗಿಸಲಾಗುತ್ತಿತ್ತು. ಒಂದು ತಿಂಗಳಿಗೂ ಅಧಿಕ ಕಾಲ ಆಸ್ಪತ್ರೆಯಲ್ಲಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೆಯೇ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ, ಓರ್ವ ಪುತ್ರಿ ಹಾಗೂ ಪುತ್ರ ಇದ್ದಾರೆ.

ಸಿದ್ದಲಿಂಗಯ್ಯ ಅವರು ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದು, ದಲಿತ ಕವಿ ಎಂದೇ ಜನಪ್ರಿಯರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.