ADVERTISEMENT

ತಿ.ನರಸೀಪುರ ಬಳಿ ಕಾರು –ಬಸ್ ಅಪಘಾತದಲ್ಲಿ 10 ಮಂದಿ ಸಾವು: ಪರಿಹಾರ ಘೋಷಿಸಿದ ಪ್ರಧಾನಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಮೇ 2023, 15:24 IST
Last Updated 29 ಮೇ 2023, 15:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದ ಬಳಿ ಕಾರು –ಖಾಸಗಿ ಬಸ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಮೈಸೂರಿನಲ್ಲಿ ನಡೆದ ಭೀಕರ ಅಪಘಾತದಿಂದ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ನನ್ನ ಸಂತಾಪ. ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ತಿಳಿಸಿದ್ದಾರೆ.

ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್‌ಎಫ್) ತಲಾ ₹2 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ₹50,000 ಪರಿಹಾರ ನೀಡಲಾಗುವುದು ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ ಟ್ವೀಟ್ ಮಾಡಿದೆ.

ADVERTISEMENT

ಮೈಸೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಕ್ಕಳೂ ಸೇರಿದಂತೆ ಹಲವು ಮಂದಿ ಮೃತಪಟ್ಟಿರುವುದು ದುರದೃಷ್ಟಕರ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದಾರೆ.

ಮೃತರು ಬಳ್ಳಾರಿ ಜಿಲ್ಲೆಯವರು ಎಂದು ಗುರುತಿಸಲಾಗಿದೆ. ಮಹದೇಶ್ವರ ಬೆಟ್ಟದಿಂದ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.