
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಶುಕ್ರವಾರ) ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.
‘ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ’ ಎಂದು ಮೋದಿ ಅವರು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.
‘ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಪ್ರಧಾನಿಯವರು ಕೃಷ್ಣಮಠಕ್ಕೆ ಬರಲಿದ್ದು, ಮೊದಲು ಕನಕದಾಸರಿಗೆ ಪುಷ್ಪಾರ್ಚನೆ ಮಾಡುವರು ಬಳಿಕ ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚ, ಸುವರ್ಣ ತೀರ್ಥ ಮಂಟಪವನ್ನು ಅನಾವರಣಗೊಳಿಸುವರು’ ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.
ಮೋದಿ ಭೇಟಿ ಹಿನ್ನೆಲೆಯಲ್ಲಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಉಡುಪಿಯ ವಿವಿಧ ಸ್ಥಳಗಳಲ್ಲಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಮತ್ತು ಬದಲಿ ವ್ಯವಸ್ಥೆ ಮಾಡಲಾಗಿದೆ. ವಾಹನಗಳ ಪಾರ್ಕಿಂಗ್‌ಗೂ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಾಳೆ ಬೆಳಿಗ್ಗೆ 8 ಗಂಟೆಯಿಂದ ಸಂಜೆ 3 ಗಂಟೆಯವರೆಗೆ ಶ್ರೀ ಕೃಷ್ಣ ಮಠಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಪುತ್ತಿಗೆ ಶ್ರೀ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.