ADVERTISEMENT

ಲೋಕಸಭಾ ಚುನಾವಣೆ ಪ್ರಚಾರಕ್ಕೆ ಹುಬ್ಬಳ್ಳಿಗೆ ಇಂದು ಪ್ರಧಾನಿ ಮೋದಿ

ರಾಜ್ಯದಲ್ಲಿ ಮೊದಲ ಪ್ರಚಾರ ಸಭೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2019, 20:00 IST
Last Updated 9 ಫೆಬ್ರುವರಿ 2019, 20:00 IST
ಹುಬ್ಬಳ್ಳಿಯಲ್ಲಿ ಭಾನುವಾರ ನಡೆಯಲಿರುವ ಪ್ರಧಾನಿ ಮೋದಿ ಕಾರ್ಯಕ್ರಮದ ಮುಖ್ಯ ವೇದಿಕೆಯನ್ನು ಶ್ವಾನ ದಳ ಹಾಗೂ ಬಾಂಬ್‌ ನಿಷ್ಕ್ರಿಯ ದಳದ ಸಿಬ್ಬಂದಿ ಶನಿವಾರ ಭದ್ರತಾ ತಪಾಸಣೆ ನಡೆಸಿದರು –ಪ್ರಜಾವಾಣಿ ಚಿತ್ರ
ಹುಬ್ಬಳ್ಳಿಯಲ್ಲಿ ಭಾನುವಾರ ನಡೆಯಲಿರುವ ಪ್ರಧಾನಿ ಮೋದಿ ಕಾರ್ಯಕ್ರಮದ ಮುಖ್ಯ ವೇದಿಕೆಯನ್ನು ಶ್ವಾನ ದಳ ಹಾಗೂ ಬಾಂಬ್‌ ನಿಷ್ಕ್ರಿಯ ದಳದ ಸಿಬ್ಬಂದಿ ಶನಿವಾರ ಭದ್ರತಾ ತಪಾಸಣೆ ನಡೆಸಿದರು –ಪ್ರಜಾವಾಣಿ ಚಿತ್ರ   

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಫೆ.10) ನಗರದಲ್ಲಿ ರಾಜ್ಯದ ಮೊದಲ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಹೊರವಲಯದ ಗಬ್ಬೂರು ಬೈಪಾಸ್‌ ಬಳಿ ಇರುವ ಕೆಎಲ್‌ಇ ಸಂಸ್ಥೆಯ ಉದ್ದೇಶಿತ ಮೆಡಿಕಲ್‌ ಕಾಲೇಜು ಹಾಗೂ ಆಸ್ಪತ್ರೆಯ ಮೈದಾನದಲ್ಲಿ ಪಕ್ಷದ ಬೃಹತ್‌ ಸಮಾವೇಶ ನಡೆಯಲಿದೆ.

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಅಭೂತಪೂರ್ವ ಭದ್ರತೆ ಒದಗಿಸಲಾಗಿದ್ದು, ನಾಲ್ಕು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರಧಾನಿಯವರ ವಿಶೇಷ ಭದ್ರತಾ ಪಡೆ (ಎಸ್‌ಪಿಜಿ) ಮೂರು ದಿನಗಳ ಹಿಂದೆಯೇ ನಗರದಲ್ಲಿ ಬೀಡು ಬಿಟ್ಟಿದ್ದು, ಭದ್ರತಾ ಉಸ್ತುವಾರಿಯ ಮೇಲ್ವಿಚಾರಣೆ ವಹಿಸಿದೆ.

ADVERTISEMENT

ಧಾರವಾಡ, ಉತ್ತರ ಕನ್ನಡ ಹಾಗೂ ಗದಗ– ಹಾವೇರಿ ಜಿಲ್ಲೆಗಳ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅದಕ್ಕಾಗಿ ಭವ್ಯ ವೇದಿಕೆಯನ್ನು ನಿರ್ಮಿಸಲಾಗಿದ್ದು, 90 ಸಾವಿರ ಕುರ್ಚಿಗಳನ್ನು ಹಾಕಿಸಲಾಗಿದೆ.

ಪ್ರಧಾನಿ ಸಂಜೆ 5.45ಕ್ಕೆ ಮುಖ್ಯ ವೇದಿಕೆಗೆ ಆಗಮಿಸಲಿದ್ದಾರೆ. ಸಮಾವೇಶ ಉದ್ದೇಶಿಸಿ ಮಾತನಾಡುವುದಕ್ಕೂ ಮುನ್ನ ವೇದಿಕೆಯ ಸಮೀಪದಲ್ಲೇ ನಡೆಯುವ ಸರ್ಕಾರಿ ಕಾರ್ಯಕ್ರಮದಲ್ಲಿ ಧಾರವಾಡ ಐಐಟಿ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ, ಗ್ಯಾಸ್‌ ಪೈಪ್‌ಲೈನ್‌ ಯೋಜನೆ ಸೇರಿದಂತೆ ಕೇಂದ್ರದ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಸಮಾವೇಶದ ಮುಖ್ಯ ವೇದಿಕೆಯಲ್ಲಿ ಮೋದಿ ಅವರೊಂದಿಗೆ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ರಮೇಶ ಜಿಗಜಿಣಗಿ, ಅನಂತಕುಮಾರ ಹೆಗಡೆ, ಸಂಸದರಾದ ಪ್ರಹ್ಲಾದ ಜೋಶಿ, ಸುರೇಶ ಅಂಗಡಿ, ಪಿ.ಸಿ.ಗದ್ದಿಗೌಡರ, ಶಿವಕುಮಾರ ಉದಾಸಿ, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಸೇರಿದಂತೆ ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಪಕ್ಷದ ಶಾಸಕರು, ವಿಧಾನಪರಿಷತ್‌ ಸದಸ್ಯರು ಸೇರಿದಂತೆ 41 ಗಣ್ಯರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.