ADVERTISEMENT

ಶೀಘ್ರವೇ ಪೊಲೀಸ್ ಮಹಾನಿರ್ದೇಶಕರ ನೇಮಕ: ಹೈಕೋರ್ಟ್‌ಗೆ ತಿಳಿಸಿದ ಅಡ್ವೊಕೇಟ್ ಜನರಲ್

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2025, 16:16 IST
Last Updated 28 ಆಗಸ್ಟ್ 2025, 16:16 IST
<div class="paragraphs"><p>ಪೊಲೀಸ್</p></div>

ಪೊಲೀಸ್

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ‘ಕೇಂದ್ರ ಲೋಕಸೇವಾ ಆಯೋಗದ  ಉನ್ನತಮಟ್ಟದ ಸಮಿತಿಗೆ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರನ್ನು ನೇಮಕ ಮಾಡುವ ಸಂಬಂಧ ನಿರ್ದಿಷ್ಟ ಹೆಸರುಗಳನ್ನು ಶಿಫಾರಸು ಮಾಡಲಾಗಿದ್ದು, ಅಲ್ಲಿಂದ ವರದಿ ಬಂದ ಒಂದು ವಾರದಲ್ಲಿ ಕಾಯಂ ನೇಮಕ ಮಾಡಲಾಗುವುದು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ADVERTISEMENT

‘ರಾಜ್ಯ ಪ್ರಭಾರ ಪೊಲೀಸ್‌ ಮಹಾ ನಿರ್ದೇಶಕರಾಗಿ (ಡಿಜಿ-ಐಜಿಪಿ) ಐಪಿಎಸ್‌ ಅಧಿಕಾರಿ ಎಂ.ಎ.ಸಲೀಂ ಅವರನ್ನು ನೇಮಕ ಮಾಡಿ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು’ ಎಂದು ಕೋರಿ ಹೈಕೋರ್ಟ್‌ ವಕೀಲೆ ಸುಧಾ ಕಾಟ್ವ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಜಾಗೊಳಿಸಿತು.

ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ ಅವರು, ‘ನಿರ್ದಿಷ್ಟ ಅಧಿಕಾರಿಗಳ ಹೆಸರುಗಳನ್ನು ಆಯೋಗಕ್ಕೆ ಶಿಫಾರಸು ಮಾಡಲಾಗಿದೆ. ಯುಪಿಎಸ್‌ಸಿ ಸಮಿತಿಯು ಇದೇ 26ರಂದು ಸಭೆಯನ್ನೂ ನಡೆಸಿದೆ. ಅಲ್ಲಿಂದ ವರದಿ ಬಂದ ಬಳಿಕ ಕ್ರಮ ವಹಿಸಲಾಗುವುದು’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಇದಕ್ಕೆ ಅರ್ಜಿದಾರರ ಪರ ವಕೀಲ ಎಸ್‌.ಉಮಾಪತಿ, ‘ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸುವ ತನಕ ಅರ್ಜಿಯನ್ನು ಬಾಕಿ ಉಳಿಸಬೇಕು’ ಎಂದು ಕೋರಿದರು. ಆದರೆ, ಇದನ್ನು ತಿರಸ್ಕರಿಸಿದ ನ್ಯಾಯಪೀಠ, ಶಶಿಕಿರಣ ಶೆಟ್ಟಿ ಅವರ ಹೇಳಿಕೆಯನ್ನು ದಾಖಲಿಸಿಕೊಂಡು ಅರ್ಜಿ ವಿಲೇವಾರಿ ಮಾಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.