ADVERTISEMENT

ಬಿಟ್‌ಕಾಯಿನ್‌ ಹಗರಣ: ಕಾಂಗ್ರೆಸ್‌ ಪತ್ರಿಕಾಗೋಷ್ಠಿಯಲ್ಲಿ ಗುಪ್ತದಳ ಅಧಿಕಾರಿ!

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2021, 13:15 IST
Last Updated 17 ನವೆಂಬರ್ 2021, 13:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಹ್ಯಾಕರ್‌ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಭಾಗಿಯಾಗಿರುವ ಬಿಟ್‌ಕಾಯಿನ್‌ ಹ್ಯಾಕಿಂಗ್‌ ಹಗರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಮುಖಂಡರು ಬುಧವಾರ ನಡೆಸಿದ ಪತ್ರಿಕಾಗೋಷ್ಠಿಯ ವೇಳೆ ಹಾಜರಿದ್ದ ರಾಜ್ಯ ಗುಪ್ತದಳದ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಹೊರಕ್ಕೆ ಕಳುಹಿಸಿದ ಘಟನೆ ನಡೆಯಿತು.

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಮತ್ತು ಶಾಸಕ ಪ್ರಿಯಾಂಕ್‌ ಖರ್ಗೆ ಪತ್ರಿಕಾಗೋಷ್ಠಿ ನಿಗದಿಯಾಗಿತ್ತು. ಗೋಷ್ಠಿ ಆರಂಭಕ್ಕೂ ಮೊದಲೇ ಮಫ್ತಿಯಲ್ಲಿ ಬಂದಿದ್ದ ಗುಪ್ತದಳದ ಪೊಲೀಸ್‌ ಇನ್‌ಸ್ಪೆಕ್ಟರ್‌ ಕಾತ್ಯಾಯಿನಿ ಆಳ್ವ ಮತ್ತು ಸಿಬ್ಬಂದಿ ಸಭಾಂಗಣದಲ್ಲಿ ಆಸೀನರಾಗಿದ್ದರು. ಪತ್ರಿಕಾಗೋಷ್ಠಿ ಆರಂಭವಾಗುತ್ತಿದ್ದಂತೆಯೇ ಕಾಂಗ್ರೆಸ್‌ ಮುಖಂಡ ಎಂ. ರಾಮಚಂದ್ರಪ್ಪ ಮತ್ತು ಕೆಲವು ಕಾರ್ಯಕರ್ತರು, ಪೊಲೀಸ್‌ ಅಧಿಕಾರಿಗಳು ಅಲ್ಲಿರುವುದನ್ನು ಗುರುತಿಸಿದರು.

ಕಾತ್ಯಾಯಿನಿ ಅವರ ಬಳಿ ತೆರಳಿದ ರಾಮಚಂದ್ರಪ್ಪ, ‘ಪಕ್ಷದ ಪತ್ರಿಕಾಗೋಷ್ಠಿ ನಡೆಯುತ್ತಿದೆ. ಇಲ್ಲಿ ಪೊಲೀಸರು ಹಾಜರಿರುವುದು ಸರಿಯಲ್ಲ’ ಎಂದು ಆಕ್ಷೇಪಿಸಿದರು. ಕಾಂಗ್ರೆಸ್‌ ಕಾರ್ಯಕರ್ತರೂ ಪೊಲೀಸರು ಹೊರ ಹೋಗಬೇಕೆಂದು ಆಗ್ರಹಿಸಿದರು. ಬಳಿಕ ಪೊಲೀಸರು ಅಲ್ಲಿಂದ ಹೊರ ನಡೆದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.