ಬೆಂಗಳೂರು: ದ್ವೇಷ ಭಾಷಣ, ಪ್ರಚೋದನಕಾರಿ ಹೇಳಿಕೆ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಪ್ರಕಟಿಸುತ್ತಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚುವ ಕೆಲಸವು ರಾಜ್ಯದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ವಾರದಿಂದ ವೇಗ ಪಡೆದುಕೊಂಡಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಮತ್ತು ತಪ್ಪು ಮಾಹಿತಿ ಹಂಚಿಕೊಂಡಿದ್ದು, ಸಾಬೀತಾದರೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲು ಅವಕಾಶ ನೀಡುವ ಕಾನೂನು ರೂಪಿಸಲು ರಾಜ್ಯ ಸರ್ಕಾರ ಮುಂದಾದ ಬೆನ್ನಲ್ಲೇ ದ್ವೇಷ ಬಿತ್ತುವವರ ಪತ್ತೆಗಾಗಿ ಸಾಮಾಜಿಕ ಜಾಲತಾಣವನ್ನು ಪೊಲೀಸರು ಜಾಲಾಡುತ್ತಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಸಮಾಜಘಾತುಕ ವದಂತಿಗಳನ್ನು ಹಬ್ಬಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹುಬ್ಬಳ್ಳಿ–ಧಾರವಾಡ, ಬೆಳಗಾವಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸರು ವಿಫಲರಾಗಿದ್ದಾರೆ ಎಂಬ ದೂರು ಬಂದಿತ್ತು. ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧವೇ ತನಿಖೆ ಮಾಡುವಂತೆ ಗೃಹ ಇಲಾಖೆ ಸೂಚನೆ ನೀಡಿದ ಬೆನ್ನಲ್ಲೇ ಕಾರ್ಯಾಚರಣೆಗೆ ಪೊಲೀಸರು ವೇಗ ನೀಡಿದ್ದಾರೆ.
ಪ್ರಚೋದನಕಾರಿ ಹೇಳಿಕೆ, ಬರಹ ಪ್ರಕಟಿಸಿರುವುದು ಕಂಡುಬಂದ ತಕ್ಷಣವೇ ಮುಂಜಾಗ್ರತಾ ಕ್ರಮದ ವರದಿ (ಪಿಎಆರ್) ದಾಖಲಿಸಿಕೊಳ್ಳಲಾಗುತ್ತಿದೆ. ಬಳಿಕ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಜತೆಗೆ ಪೋಸ್ಟ್‌ಗಳನ್ನೂ ತೆಗೆದು ಹಾಕಲಾಗುತ್ತಿದೆ. ಒಂದು ವಾರದಲ್ಲಿ 50ಕ್ಕೂ ಹೆಚ್ಚು ಪೋಸ್ಟ್ ತೆಗೆದು ಹಾಕಲಾಗಿದೆ ಎಂದು ಪೊಲೀಸ್ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.
‘ಕಳೆದ ಎರಡೂವರೆ ವರ್ಷದಲ್ಲಿ ಸುಳ್ಳು ಹಾಗೂ ತಪ್ಪು ಮಾಹಿತಿ ಹಂಚಿಕೊಂಡಿದ್ದ 894 ಪೋಸ್ಟ್‌ಗಳನ್ನು ಅಳಿಸಿ ಹಾಕಲಾಗಿದೆ. 178 ಖಾತೆಗಳನ್ನು ತೆಗೆದು ಹಾಕಲಾಗಿದೆ. ಆರು ತಿಂಗಳಲ್ಲೇ 285 ಪೋಸ್ಟ್ ತೆಗೆದುಹಾಕಿ, 54 ಖಾತೆ ರದ್ದುಗೊಳಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
‘ಕಳೆದ ಎರಡೂವರೆ ವರ್ಷದಲ್ಲಿ 218 ಮಂದಿ ದ್ವೇಷ ಭಾಷಣ ಮಾಡಿರುವುದು ವರದಿ ಆಗಿತ್ತು. ಆ ಪೈಕಿ 48 ಪಿಎಆರ್ ದಾಖಲಿಸಿಕೊಂಡು, 127 ಮಂದಿಯನ್ನು ಬಂಧಿಸಲಾಗಿತ್ತು. ಕಳೆದ ಆರು ತಿಂಗಳಲ್ಲಿ 22 ಮಂದಿಯನ್ನು ಬಂಧಿಸಲಾಗಿದೆ’ ಎಂದೂ ಅವರು ಮಾಹಿತಿ ನೀಡಿದರು.
‘ಸುಳ್ಳು ಸುದ್ದಿಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಶಿಕ್ಷೆಯ ಪ್ರಮಾಣ ಕಡಿಮೆ ಆಗುತ್ತಿದೆ. ಆರೋಪಿಗಳಿಗೆ ಶಿಕ್ಷೆ ಆಗುವಂತೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಬೇಕೆಂದು ತನಿಖಾಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಮೂಲಗಳು ಹೇಳಿವೆ.
‘ರಾಜಧಾನಿಯಲ್ಲಿ ಈ ರೀತಿಯ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿದ್ದು, ಆರೋಪಿಗಳ ಪತ್ತೆ, ತನಿಖೆ ಚುರುಕು ಮಾಡುವಂತೆ ‘ಸಾಮಾಜಿಕ ಜಾಲತಾಣಗಳ ಮೇಲ್ವಿಚಾರಣಾ ದಳ’ದ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಪರಾಧ ವಿಭಾಗದ ಸಿಬ್ಬಂದಿ, ಠಾಣೆಯ ಗುಪ್ತವಾರ್ತೆ ಸಿಬ್ಬಂದಿ ಹಾಗೂ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲು ನೇಮಿಸಲಾಗಿರುವ ಸಿಬ್ಬಂದಿ ಸಮನ್ವಯದಿಂದ ಕೆಲಸ ಮಾಡುವಂತೆ ತಿಳಿಸಲಾಗಿದೆ. ತಪ್ಪು ಮಾಹಿತಿಯಿಂದ ಕೋಮು ಸಂಘರ್ಷಕ್ಕೆ ಕಾರಣವಾಗುವ ವ್ಯಕ್ತಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದೂ ಸಿಬ್ಬಂದಿಗೆ ಸಭೆಯಲ್ಲಿ ಸೂಚನೆ ನೀಡಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ತಿಳಿಸಿದರು.
‘ಮಾಹಿತಿ ಹಂಚಿಕೆ: ಅನುಮತಿ ಕಡ್ಡಾಯ’
ಆರ್‌ಸಿಬಿ ತಂಡದ ವಿಜಯೋತ್ಸವಕ್ಕೆ ಆರ್‌ಸಿಬಿ ಮ್ಯಾನೇಜ್‌ಮೆಂಟ್ ಉಚಿತ ಪಾಸ್ ನೀಡುವುದಾಗಿ ಸಾಮಾಜಿಕ ಮಾಧ್ಯಮ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿತ್ತು. ಈ ಮಾಹಿತಿ ಹಂಚಿಕೊಳ್ಳುವ ಮೊದಲು ಪೊಲೀಸ್ ಇಲಾಖೆಗೂ ಮ್ಯಾನೇಜ್‌ಮೆಂಟ್ ಮಾಹಿತಿ ನೀಡಿರಲಿಲ್ಲ. ಮುಂದಿನ ದಿನಗಳಲ್ಲಿ ಈ ರೀತಿ ಪ್ರಮಾದ ಆಗದಂತೆ ನಿಗಾ ವಹಿಸಬೇಕು. ಹೆಚ್ಚಿನ ಜನರು ಜಮಾವಣೆಗೊಳ್ಳುವ ಸಭೆ ಪ್ರತಿಭಟನೆ ರ್‍ಯಾಲಿ ವಿಜಯೋತ್ಸವಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಳ್ಳುವ ಮೊದಲು ಇಲಾಖೆಯ ಅನುಮತಿ ಪಡೆದುಕೊಳ್ಳಬೇಕೆಂಬ ನಿಯಮ ಇದೆ. ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಕಾನೂನು ಸುವ್ಯವಸ್ಥೆ ಹಾಗೂ ಸೌಹಾರ್ದಕ್ಕೆ ಅಪಾಯ ತಂದೊಡ್ಡುವ ವ್ಯಕ್ತಿಗಳು ಹಾಗೂ ಶಕ್ತಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ. ಪ್ರಕರಣಗಳ ತನಿಖೆಗೂ ವೇಗ ನೀಡಲಾಗಿದೆ.ಡಾ.ಎಂ.ಎ.ಸಲೀಂ, ರಾಜ್ಯ ಪೊಲೀಸ್ ಮಹಾನಿರ್ದೇಶಕ
ಇನ್‌ಸ್ಟಾಗ್ರಾಂ ‘ಎಕ್ಸ್’ ಖಾತೆ ಫೇಸ್‌ಬುಕ್ ಮೇಲೆ ಕಣ್ಗಾವಲು ಇಡುವಂತೆ ಸೂಚಿಸಲಾಗಿದೆ. ಸಾಮರಸ್ಯಕ್ಕೆ ಧಕ್ಕೆ ತರುವ ವಿಚಾರಗಳು ಕಂಡುಬಂದರೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕೆಂದು ಸಿಬ್ಬಂದಿಗೆ ತಿಳಿಸಲಾಗಿದೆ.ಸೀಮಂತ್‌ಕುಮಾರ್ ಸಿಂಗ್, ಪೊಲೀಸ್ ಕಮಿಷನರ್ ಬೆಂಗಳೂರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.