ADVERTISEMENT

ಪೊಲೀಸ್‌ ವರ್ಗಾವಣೆ: ಹೊಸ ಪ್ರಮಾಣಪತ್ರ ಸಲ್ಲಿಸಲು ಆದೇಶ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2019, 2:12 IST
Last Updated 29 ನವೆಂಬರ್ 2019, 2:12 IST
   

ಬೆಂಗಳೂರು: ‘ಪೊಲೀಸ್ ಅಧಿಕಾರಿಗಳ ವರ್ಗಾವಣೆ ವಿಷಯದಲ್ಲಿ ರಾಜಕಾರಣಿಗಳ ಹಸ್ತಕ್ಷೇಪ ಪರಿಗಣಿಸುವುದಿಲ್ಲ’ ಎಂಬ ಭರವಸೆಯ ಪ್ರಮಾಣ ಪತ್ರ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿರುವ ಹೈಕೋರ್ಟ್, ಇದಕ್ಕಾಗಿ ಎರಡು ವಾರಗಳ ಕಾಲಾವಕಾಶ ನೀಡಿದೆ.

ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಹಾಗೂ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರು ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಪೊಲೀಸ್ ಸಿಬ್ಬಂದಿ ಮಂಡಳಿ ಅಧ್ಯಕ್ಷರೂ ಆದ ಡಿಜಪಿ ನೀಲಮಣಿ ಅವರ ಪ್ರಮಾಣ ಪತ್ರವನ್ನುವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಸಲ್ಲಿಸಿದರು.

ADVERTISEMENT

ಆದರೆ, ಈ ಪ್ರಮಾಣ ಪತ್ರವನ್ನು ಒಪ್ಪಲು ನಿರಾಕರಿಸಿದ ನ್ಯಾಯಪೀಠ, ‘2019ರ ಅಕ್ಟೋಬರ್ 25ರಂದು ಕೋರ್ಟ್‌ ನೀಡಿರುವ ಆದೇಶದ ಅನುಸಾರ ರಾಜ್ಯ ಸರ್ಕಾರವೇ ಪ್ರಮಾಣ ಪತ್ರ ಸಲ್ಲಿಸಬೇಕು’ ಎಂದು ನಿರ್ದೇಶಿಸಿ ವಿಚಾರಣೆಯನ್ನು ಡಿಸೆಂಬರ್ 18ಕ್ಕೆ ಮುಂದೂಡಿದೆ.

‘ಯಾವುದೇ ಕಾರಣಕ್ಕೂ ಪೊಲೀಸರ ವರ್ಗಾವಣೆಯಲ್ಲಿ ಜನಪ್ರತಿನಿಧಿಗಳು ಮೂಗು ತೂರಿಸುವಂತಿಲ್ಲ. ಈ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪು ಅತ್ಯಂತ ಸ್ಪಷ್ಟವಾಗಿದೆ. ಆದ್ದರಿಂದ ಸರ್ಕಾರ ರಾಜಕಾರಣಿಗಳ ಶಿಫಾರಸು ಪತ್ರಗಳನ್ನು ಪರಿಗಣಿಸುವುದಿಲ್ಲ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಬೇಕು’ ಎಂದು ನ್ಯಾಯಪೀಠ ತಾಕೀತು ಮಾಡಿದೆ.

ಏನಿದು ಅರ್ಜಿ?: ‘ಈ ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಶಿಫಾರಸು ಮಾಡಿರುವ ರಾಜ್ಯದ 24 ಜನಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಮತ್ತು ಅವರ ವಿರುದ್ಧ ಎಸ್‌ಐಟಿ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಅಖಿಲ ‘ಕರ್ನಾಟಕ ಪೊಲೀಸ್ ಮಹಾಸಂಘ’ದ ಅಧ್ಯಕ್ಷ ವಿ. ಶಶಿಧರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.