ADVERTISEMENT

ಚುಂಚನಗಿರಿ ಮಠದಲ್ಲಿ ರಾಜಕೀಯ: ಅಶೋಕ ವಿರುದ್ಧ ಕಾಂಗ್ರೆಸ್‌ ದೂರು

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2024, 16:13 IST
Last Updated 12 ಏಪ್ರಿಲ್ 2024, 16:13 IST
<div class="paragraphs"><p>ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ</p></div>

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ

   

ಬೆಂಗಳೂರು: ಆದಿಚುಂಚನಗಿರಿ ಮಠದ ಬೆಂಗಳೂರಿನ ವಿಜಯನಗರ ಶಾಖಾ ಮಠವನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಚುನಾವಣಾ ರಾಜಕೀಯಕ್ಕೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ, ಅವರ ವಿರುದ್ಧ ಕ್ರಮ ಜರುಗಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದೆ.

ಅಶೋಕ ಅವರು ಬುಧವಾರ (ಏಪ್ರಿಲ್‌ 10) ಮಠಕ್ಕೆ ಭೇಟಿ ನೀಡಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಮಾತುಕತೆ ನಡೆಸಿದ್ದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿ, ‘ಆದಿಚುಂಚನಗಿರಿ ಮಠವು ಬಿಜೆಪಿಯ ಶಕ್ತಿ ಕೇಂದ್ರ. ಈ ಮಠದ ಆಶೀರ್ವಾದ ಪಡೆದ ನಮ್ಮ ಎಲ್ಲ ಅಭ್ಯರ್ಥಿಗಳೂ ಗೆಲ್ಲುತ್ತಾರೆ. ಅದೇ ವಿಶ್ವಾಸದಿಂದ ಹೊರಡುತ್ತಿದ್ದೇವೆ’ ಎಂದು ಹೇಳಿದ್ದರು.

ADVERTISEMENT

ಅಶೋಕ ಅವರ ಹೇಳಿಕೆಯ ವಿಡಿಯೊ ತುಣುಕನ್ನು ಲಗತ್ತಿಸಿ ಕೆಪಿಸಿಸಿ ಮುಖ್ಯ ವಕ್ತಾರ ನಟರಾಜ್‌ ಗೌಡ ಹಾಗೂ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್‌ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್‌ ಮೀನಾ ಅವರಿಗೆ ಶುಕ್ರವಾರ ದೂರು ಸಲ್ಲಿಸಿದ್ದಾರೆ.

‘ಅಶೋಕ ಅವರು ಪದೇ ಪದೇ ಧರ್ಮದ ಹೆಸರಿನಲ್ಲಿ ಮತ ಯಾಚಿಸುತ್ತಿದ್ದಾರೆ. ಮಠಗಳು ಬಿಜೆಪಿಯನ್ನು ಬೆಂಬಲಿಸುತ್ತಿವೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಆ ಮೂಲಕ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.