ADVERTISEMENT

ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ: 25ರಂದು ದೆಹಲಿಯಲ್ಲಿ ‘ಕೈ’ ನಾಯಕರ ಸಭೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2022, 4:04 IST
Last Updated 20 ಫೆಬ್ರುವರಿ 2022, 4:04 IST
   

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಎರಡು ತಿಂಗಳು ಬಾಕಿ ಇರುವಾಗಲೇ ಅದರತ್ತ ಕಣ್ಣಿಟ್ಟು ಕಾರ್ಯತಂತ್ರ ರೂಪಿಸಲು ಮುಂದಾಗಿರುವ ಕಾಂಗ್ರೆಸ್‌ ಹೈಕಮಾಂಡ್‌, ಈ ಬಗ್ಗೆ ಚರ್ಚಿಸಲು ಇದೇ (ಫೆಬ್ರುವರಿ) 25ರಂದು ದೆಹಲಿಗೆ ಬರುವಂತೆ ಪಕ್ಷದ ರಾಜ್ಯ ಮುಖಂಡರಿಗೆ ಆಹ್ವಾನ ನೀಡಿದೆ.

25ರಂದು ಸಂಜೆ 4 ಗಂಟೆಗೆ ದೆಹಲಿಯಲ್ಲಿ ಎಐಸಿಸಿ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಈ ಮಹತ್ವದ ಸಭೆ ನಡೆಯಲಿದೆ. ಅಂದು ದೆಹಲಿಗೆ ಬರುವಂತೆ ರಾಜ್ಯಸಭೆಯ ಕಾಂಗ್ರೆಸ್‌ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಅವರಿಗೆ ಆಹ್ವಾನ ಬಂದಿದೆ ಎಂದು ಕಾಂಗ್ರೆಸ್‌ ಮೂಲಗಳು ಖಚಿತಪಡಿಸಿವೆ.

ಸಭೆಯಲ್ಲಿ ರಾಹುಲ್‌ ಜೊತೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಕೂಡಾ ಇರಲಿದ್ದಾರೆ. ರಾಜ್ಯ ರಾಜಕೀಯದ ಸದ್ಯದ ವಿದ್ಯಮಾನಗಳನ್ನು ಅವಲೋಕಿಸುವ ಜೊತೆಗೆ ಚುನಾವಣೆಗೆ ಸಿದ್ಧವಾಗುವ ನಿಟ್ಟಿನಲ್ಲಿ ಪಕ್ಷವನ್ನು ಸಂಘಟಿಸುವ ಬಗ್ಗೆ ಹಿರಿಯ ನಾಯಕರು ಈ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ. ಅಲ್ಲದೆ, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ವರಿಷ್ಠರು ರಾಜ್ಯ ನಾಯಕರಿಗೆ ಸಲಹೆ, ಸೂಚನೆಗಳನ್ನು ನೀಡುವ ಸಾಧ್ಯತೆಯೂ ಇದೆ ಎಂದೂ ಮೂಲಗಳು ಹೇಳಿವೆ.

ADVERTISEMENT

ಕೆಪಿಸಿಸಿ ಪ್ರಚಾರ ಸಮಿತಿಗೆ ಎಂ.ಬಿ. ಪಾಟೀಲ ಅವರ ನೇಮಕ ಹೊರತುಪಡಿಸಿದರೆ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಇನ್ನೂ ಅಂತಿಮವಾಗಿಲ್ಲ. ಚುನಾವಣೆಗೆ ಸಿದ್ಧತೆ ನಡೆಸಲು ಪದಾಧಿಕಾರಿಗಳನ್ನು ನೇಮಿಸಿ, ಹೊಣೆಗಾರಿಕೆ ಹಂಚಬೇಕಿದೆ. ಜೊತೆಗೆ, ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟು ಹೋರಾಟಗಳನ್ನು ಹಮ್ಮಿಕೊಂಡು ಜನರ ಒಲವು ಗಳಿಸಬೇಕಿದೆ. ಅಲ್ಲದೆ, ವಿವಿಧ ವಿಚಾರಗಳಲ್ಲಿ ಪಕ್ಷಕ್ಕೆ ಅನುಕೂಲವಾಗುವಂತೆ ರಾಜಕೀಯವಾಗಿ ತೆಗೆದುಕೊಳ್ಳಬೇಕಾದ ನಿಲುವುಗಳ ಬಗ್ಗೆಯೂ ಚರ್ಚೆ ನಡೆಯುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.