ಬೆಂಗಳೂರು: ‘ಕಳಪೆ ಗುಣಮಟ್ಟದ ಕೃಷಿ ಸಲಕರಣೆ ವಿತರಿಸುವ ಮೂಲಕ ರೈತರ ಸಂಕಷ್ಟಕ್ಕೆ ಕಾರಣರಾದ ಅಧಿಕಾರಿಗಳು ಹಾಗೂ ಸಲಕರಣೆ ಪೂರೈಕೆ ಕಂಪನಿಗಳ ವಿರುದ್ಧ ತನಿಖೆ ನಡೆಸಲು ನಿರ್ದೇಶಿಸಬೇಕು’ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಲೋಕಾಯುಕ್ತ ಸಂಸ್ಥೆಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ, 'ಅಖಂಡ ಕರ್ನಾಟಕ ರೈತ ಸಂಘ’ದ ಪ್ರಧಾನ ಕಾರ್ಯದರ್ಶಿ ಬಸವನ ಬಾಗೇವಾಡಿ ತಾಲ್ಲೂಕಿನ ಇಂಗಳೇಶ್ವರದ ಅರವಿಂದ ಕುಲಕರ್ಣಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಕೃಷಿ ಆಯುಕ್ತ, ತೋಟಗಾರಿಕೆ ನಿರ್ದೇಶಕ ಮತ್ತು ಲೋಕಾಯುಕ್ತ ಸಂಸ್ಥೆಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಜುಲೈ 8ಕ್ಕೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.