ADVERTISEMENT

ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡಿಕೆ: ಪ್ರಮಾಣಪತ್ರ ಸಲ್ಲಿಸಲು ಹೈಕೋರ್ಟ್‌ ಆದೇಶ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 16:34 IST
Last Updated 4 ಆಗಸ್ಟ್ 2021, 16:34 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಡಿಸೆಂಬರ್ ತನಕ ಮುಂದೂಡಿರುವ ರಾಜ್ಯ ಸಚಿವ ಸಂಪುಟದ ನಿರ್ಧಾರ ಸಮರ್ಥಿಸುವ ಪ್ರಮಾಣಪತ್ರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಈ ಸಂಬಂಧ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಧಾರ್ಮಿಕ ಸ್ಥಳಗಳಿಗೆ ಜನರು ಭೇಟಿ ನೀಡಲು ಸರ್ಕಾರ ಅನುಮತಿ ನೀಡಿದೆ. ಆದರೆ, ಮತಗಟ್ಟೆಗಳಿಗೆ ಬರಲು ಅವಕಾಶ ಇಲ್ಲ ಎಂದರೆ ಏನರ್ಥ’ ಎಂದು ಸರ್ಕಾರದ ವಕೀಲರನ್ನು ಪ್ರಶ್ನಿಸಿತು.

‘ಸಾಂಕ್ರಾಮಿಕ ರೋಗ ಉಲ್ಬಣಗೊಂಡಿದ್ದ ಸಂದರ್ಭದಲ್ಲೇ ವಿಧಾನಸಭೆ ಉಪಚುನಾವಣೆಗಳನ್ನು ನಡೆಸಲಾಯಿತು. ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಸಚಿವ ಸಂಪುಟ ನಿರ್ಧಾರ ಕೈಗೊಂಡ ಸಮಯದಲ್ಲಿ ಕೋವಿಡ್ ಪರಿಸ್ಥಿತಿ ಸುಧಾರಿಸಿತ್ತು. ಆದರೂ ವರ್ಷಾಂತ್ಯದ ತನಕ ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಪೀಠ ಹೇಳಿತು.

ADVERTISEMENT

ರಾಜ್ಯ ಚುನಾವಣಾ ಆಯೋಗದ ಪರ ಹಾಜರಾಗಿದ್ದ ಹಿರಿಯ ವಕೀಲ ಕೆ.ಎನ್‌. ಫಣೀಂದ್ರ, ‘ಜುಲೈ 28ರಂದು ಸಭೆ ನಡೆಸಲಾಗಿದ್ದು, ಬೆಳಗಾವಿ, ಕಲಬುರ್ಗಿ, ಹುಬ್ಬಳ್ಳಿ–ಧಾರವಾಡ, ದೊಡ್ಡಬಳ್ಳಾಪುರ, ತರೀಕೆರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಹೇಳಿದರು. ವಿಚಾರಣೆಯನ್ನು ಪೀಠ ಆ.13ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.