
ಪ್ರಭಾ ಮಲ್ಲಿಕಾರ್ಜುನ್
ದಾವಣಗೆರೆ: ‘ಮನರೇಗಾ’ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರಕ್ಕೆ 11 ವರ್ಷ ಬೇಕಾಯಿತೇ’ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಪ್ರಶ್ನಿಸಿದರು.
‘ಯೋಜನೆಯಲ್ಲಿ ಅವ್ಯವಹಾರ ನಡೆಯುತ್ತಿದ್ದರೆ ತನಿಖೆ ನಡೆಸಲು ಕೇಂದ್ರ ಸರ್ಕಾರಕ್ಕೆ ಅವಕಾಶವಿತ್ತು. ಇದನ್ನು ಬಿಟ್ಟು ಯೋಜನೆಯ ಮೂಲಸ್ವರೂಪವನ್ನೇ ಬದಲಿಸಿದೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹರಿಹಾಯ್ದರು.
‘ಮನರೇಗಾ’ ಯೋಜನೆಯ ಸ್ವರೂಪ ಬದಲಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ರಾಜ್ಯದಲ್ಲಿ ಕಾಂಗ್ರೆಸ್ ಹೋರಾಟ ಕೈಗೆತ್ತಿಕೊಂಡಿದೆ. ಪಕ್ಷದ ಎಲ್ಲ ಕಾರ್ಯಕರ್ತರು, ಮನರೇಗಾ ಕಾರ್ಮಿಕರು ಈ ಹೋರಾಟದಲ್ಲಿ ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು.
‘ಮನರೇಗಾ’ ಯೋಜನೆಯಡಿ ಗ್ರಾಮಗಳನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸಲಾಗಿದೆ. ಕೆರೆ, ರಸ್ತೆ, ಶಾಲೆ, ನಾಲೆ, ಚರಂಡಿ ಸೇರಿ ಹಲವು ಕಾಮಗಾರಿಗಳನ್ನು ನಡೆಸಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿಗೆ ಸರ್ಕಾರ ಕೋಟ್ಯಂತರ ರೂಪಾಯಿ ಅನುದಾನ ನೀಡಿತ್ತು. ಗ್ರಾಮೀಣಾಭಿವೃದ್ಧಿಗೆ ಕೇಂದ್ರ ಸರ್ಕಾರ ಕೊಡಲಿ ಪೆಟ್ಟು ನೀಡಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಆರೋಪಿಸಿದರು.
‘ಗ್ರಾಮೀಣ ಪ್ರದೇಶದ ಬಡವರಿಗೆ ಕೂಲಿ ನೀಡಿ ಆರ್ಥಿಕ ಸಬಲೀಕರಣಕ್ಕೆ ಯೋಜನೆ ಒತ್ತು ನೀಡಿತ್ತು. ಕೇಂದ್ರ ಮತ್ತು ರಾಜ್ಯದ ಅನುದಾನದ ಪಾಲನ್ನು 60:40ಕ್ಕೆ ಬದಲಾವಣೆ ಮಾಡಿರುವುದು ಕೂಡ ಆಕ್ಷೇಪಾರ್ಹ. ಯೋಜನೆಯಿಂದ ಮಹಾತ್ಮ ಗಾಂಧೀಜಿ ಹೆಸರನ್ನು ಉದ್ದೇಶ ಪೂರ್ವಕವಾಗಿ ಕೈಬಿಡಲಾಗಿದೆ. ಕೇಂದ್ರ ಸರ್ಕಾರದ ಈ ಹುನ್ನಾರವನ್ನು ವಿರೋಧಿಸಿ ರಾಜ್ಯದಾದ್ಯಂತ ಹೋರಾಟ ನಡೆಸಲಾಗುತ್ತಿದೆ’ ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್, ‘ಧೂಡಾ’ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.