ADVERTISEMENT

ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಆತುರದ ಕ್ರಮ ಬೇಡ: ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 23 ಜನವರಿ 2026, 14:47 IST
Last Updated 23 ಜನವರಿ 2026, 14:47 IST
<div class="paragraphs"><p>ಪ್ರಭಾಕರ್‌ ಭಟ್‌ ಕಲ್ಲಡ್ಕ&nbsp;</p></div>

ಪ್ರಭಾಕರ್‌ ಭಟ್‌ ಕಲ್ಲಡ್ಕ 

   

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷದ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಆತುರದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

‘ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ನೀಡಲಾಗಿರುವ ದೂರು ಹಾಗೂ ಪುತ್ತೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಬೇಕು’ ಎಂದು ಕೋರಿ ಡಾ.ಪ್ರಭಾಕರ ಭಟ್ (83) ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ADVERTISEMENT

ವಿಚಾರಣೆ ವೇಳೆ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಎಂ.ಅರುಣ್‌ ಶ್ಯಾಮ್, ಕಲ್ಲಡ್ಕ ಪ್ರಭಾಕರ ಭಟ್ ಮಾತನಾಡಿದ್ದಾರೆ ಎನ್ನಲಾದ ಸಂಪೂರ್ಣ ಭಾಷಣದ ಪ್ರತಿಲಿಪಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಇದಕ್ಕೆ ಪ್ರತಿಯಾಗಿ ಪ್ರಾಸಿಕ್ಯೂಷನ್‌ ಪರ ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಆಸ್ಮಾ ಕೌಸರ್ ಕೂಡಾ 42 ನಿಮಿಷಗಳ ಭಾಷಣದ ವಿಡಿಯೊ ಒಳಗೊಂಡ ಪೆನ್‌ ಡ್ರೈವ್ ಅನ್ನು ನ್ಯಾಯಪೀಠಕ್ಕೆ ಒದಗಿಸಿದರು.

ಎರಡನ್ನೂ ಸ್ವೀಕರಿಸಿದ ನ್ಯಾಯಪೀಠ, ಭಾಷಣವನ್ನು ಪರಿಶೀಲಿಸಿದ ಬಳಿಕ ಅರ್ಜಿ ವಿಚಾರಣೆ ನಡೆಸುವುದಾಗಿ ತಿಳಿಸಿ, ವಿಚಾರಣೆಯನ್ನು ಫೆಬ್ರುವರಿ 5ಕ್ಕೆ ಮುಂದೂಡಿತು. ಅಂತೆಯೇ, ‘ಅಲ್ಲಿಯವರೆಗೂ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸಬಾರದು’ ಎಂದು ಪುತ್ತೂರು ಗ್ರಾಮೀಣ ಪೊಲೀಸರಿಗೆ ನಿರ್ದೇಶಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.