ADVERTISEMENT

ಪ್ರಜ್ವಲ್‌ ರೇವಣ್ಣ ಪ್ರಕರಣ: ಭವಾನಿ ರೇವಣ್ಣಗೆ ಜಾಮೀನು ಷರತ್ತು ಸಡಿಲಿಕೆ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2025, 15:53 IST
Last Updated 4 ಏಪ್ರಿಲ್ 2025, 15:53 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಲಾಗಿದೆ’ ಎಂಬ ಪ್ರಕರಣದಲ್ಲಿ ಎಂಟನೇ ಆರೋಪಿಯಾಗಿರುವ ಭವಾನಿ ರೇವಣ್ಣ ಅವರಿಗೆ ನೀಡಲಾಗಿದ್ದ ಜಾಮೀನಿನ ಷರತ್ತುಗಳನ್ನು ಹೈಕೋರ್ಟ್‌ ಸಡಿಲಿಸಿದೆ.

ಈ ಸಂಬಂಧ ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಪ್ರದೀಪ್‌ ಸಿಂಗ್‌ ಯೆರೂರು ಅವರು ಶುಕ್ರವಾರ ವಿಚಾರಣೆ ನಡೆಸಿ ಷರತ್ತುಗಳನ್ನು ಸಡಿಲಿಸಿ ಆದೇಶಿಸಿದರು. ಈ ಮೂಲಕ ಭವಾನಿ ಅವರಿಗೆ ಮೈಸೂರು ಮತ್ತು ಹಾಸನಕ್ಕೆ ಪ್ರವೇಶಿಸಲು ಅನುಮತಿ ನೀಡಿರುವ ನ್ಯಾಯಪೀಠ ‘ಭವಾನಿ ಅವರು ಪ್ರಕರಣದ ಸಂತ್ರಸ್ತೆ ಮತ್ತು ಸಾಕ್ಷಿಗಳು ವಾಸಿಸುವ ಸ್ಥಳದಿಂದ 500 ಮೀಟರ್‌ ವ್ಯಾಪ್ತಿಯಲ್ಲಿ ಓಡಾಡುವಂತಿಲ್ಲ. ಆದೇಶ ಉಲ್ಲಂಘಿಸಿದರೆ ನ್ಯಾಯಾಲಯದ ಮೆಟ್ಟಿಲೇರಲು ಸರ್ಕಾರ ಸ್ವತಂತ್ರವಾಗಿರುತ್ತದೆ’ ಎಂದು ಸ್ಪಷ್ಟಪಡಿಸಿದೆ. ಸಂತ್ರಸ್ತೆ ಅಪಹರಣ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆ.ಆರ್‌.ನಗರ ಠಾಣೆಯಲ್ಲಿ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ ಭವಾನಿ ಸೇರಿದಂತೆ ಒಂಬತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ತನಿಖೆ ನಡೆಸುತ್ತಿರುವ ಎಸ್‌ಐಟಿ ವಿಚಾರಣಾ ನ್ಯಾಯಾಲಯಕ್ಕೆ ಈಗಾಗಲೇ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT