
ಪ್ರಜ್ವಲ್ ರೇವಣ್ಣ
ಬೆಂಗಳೂರು: ಅತ್ಯಾಚಾರ ಪ್ರಕರಣದ ಅಪರಾಧಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು, ವಂಶವಾಹಿ (ಡಿಎನ್‌ಎ) ಮತ್ತು ಡಿಜಿಟಲ್ ಸಾಕ್ಷ್ಯಗಳ ರೆಕಾರ್ಡಿಂಗ್ ಕೋರಿ ಸಲ್ಲಿಸಿರುವ ಮಧ್ಯಂತರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಎಸ್‌ಐಟಿಗೆ ನಿರ್ದೇಶಿಸಿದೆ.
ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ವಿಧಿಸಿರುವ ಜೀವಿತಾವಧಿ ಜೈಲು ಶಿಕ್ಷೆಯನ್ನು ಅಮಾನತಿನಲ್ಲಿ ಇರಿಸಿ ಜಾಮೀನು ಮಂಜೂರು ಮಾಡಲು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಪ್ರಜ್ವಲ್ ಪರ ಹಾಜರಾಗಿದ್ದ ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ಅವರು, ‘ಕೆಲವು ಸಾಕ್ಷ್ಯಗಳ ರೆಕಾರ್ಡಿಂಗ್ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಲಾಗಿದೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು. ಇದಕ್ಕೆ ಪ್ರತಿಯಾಗಿ ರಾಜ್ಯ ಸರ್ಕಾರದ ಪರ ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್, ‘ಒಂದು ವಾರದಲ್ಲಿ ಆಕ್ಷೇಪಣೆ ಸಲ್ಲಿಸಲಾಗುವುದು’ ಎಂದು ತಿಳಿಸಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಪ್ರಜ್ವಲ್ ರೇವಣ್ಣ, ಅಪರಾಧ ದಂಡ ಪ್ರಕ್ರಿಯಾ ಸಂಹಿತೆ–1973ರ (ಸಿಆರ್‌ಪಿಸಿ) ಕಲಂ 391ರ ಅಡಿ ಕೆಲವು ಸಾಕ್ಷ್ಯಗಳ ರೆಕಾರ್ಡಿಂಗ್ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಪ್ರಾಸಿಕ್ಯೂಷನ್‌ಗೆ ಒಂದು ವಾರ ಕಾಲಾವಕಾಶ ನೀಡಲಾಗಿದೆ’ ಎಂದು ತಿಳಿಸಿ ವಿಚಾರಣೆಯನ್ನು ಇದೇ 30ಕ್ಕೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.