ಬೆಂಗಳೂರು: ‘ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ದೋಷಾರೋಪ ನಿಗದಿಪಡಿಸಿ ವಿಚಾರಣೆಗೆ ಮುಂದಾಗಿರುವ ಸೆಷನ್ಸ್ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆಯನ್ನು ಮುಂದೂಡಲು ನಿರ್ದೇಶಿಸಬೇಕು’ ಎಂಬ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮಧ್ಯಂತರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಈ ಸಂಬಂಧ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ರಿಟ್ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರು ಅವರು ಬುಧವಾರ ವಿಚಾರಣೆ ನಡೆಸಿದರು.
ಪ್ರಜ್ವಲ್ ಪರ ಪದಾಂಕಿತ ಹಿರಿಯ ವಕೀಲ ಅರುಣ್ ಶ್ಯಾಮ್, ‘ಈ ಪ್ರಕರಣದಲ್ಲಿ ಯಾವುದೇ ಸಂತ್ರಸ್ತರು ಪೊಲೀಸರಿಗೆ ದೂರು ಕೊಟ್ಟಿಲ್ಲ. ಇದೊಂದು ರಾಜಕೀಯ ಪ್ರೇರಿತವಾಗಿ ದಾಖಲಿಸಿಕೊಂಡಿರುವ ದೂರು. ಎಸ್‌ಐಟಿಗೆ ದೋಷಾರೋಪ ಪಟ್ಟಿ ಸಲ್ಲಿಸುವ ಅಧಿಕಾರ ವ್ಯಾಪ್ತಿ ಇಲ್ಲ. ಹಾಗಾಗಿ, ಈ ಪ್ರಕರಣವನ್ನು ರದ್ದುಗೊಳಿಸಬೇಕು’ ಎಂದು ಕೋರಿದರು.
ಇದಕ್ಕೆ ಪ್ರತಿಯಾಗಿ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಪದಾಂಕಿತ ಹಿರಿಯ ವಕೀಲ ರವಿವರ್ಮ ಕುಮಾರ್, ‘ಆರೋಪಿಯು ಮನೆಗೆಲಸದ ಮಧ್ಯವಯಸ್ಸಿನ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಕ್ಕೆ ಸಾಕ್ಷ್ಯ ಇದೆ. ಆರೋಪಿ ತನ್ನದೇ ಮೊಬೈಲ್‌ನಲ್ಲಿ ಈ ದೃಶ್ಯಗಳನ್ನು ಸೆರೆ ಹಿಡಿದಿದ್ದಾರೆ. ಅದರಲ್ಲಿಯ ಧ್ವನಿ ಮತ್ತು ಡಿಎನ್‌ಎ ಪರೀಕ್ಷೆಗಳೂ ಇದನ್ನು ದೃಢಪಡಿಸಿವೆ. ತನಿಖಾಧಿಕಾರಿಗಳು ಅತ್ಯಂತ ವೃತ್ತಿಪರತೆಯಿಂದ ನಡೆದುಕೊಂಡಿದ್ದಾರೆ. ಆದ್ದರಿಂದ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸದೆಯೇ ಅರ್ಜಿ ವಜಾಗೊಳಿಸಬೇಕು’ ಎಂದು ಮನವಿ ಮಾಡಿದರು.
ಇದೇ ವೇಳೆ ಅರುಣ್ ಶ್ಯಾಮ್, ‘ಈ ಅರ್ಜಿ ವಿಚಾರಣೆ ಮುಕ್ತಾಯವಾಗುವತನಕ ವಿಚಾರಣಾ ನ್ಯಾಯಾಲಯದ ಮುಂದಿನ ನ್ಯಾಯಿಕ ಪ್ರಕ್ರಿಯೆಯನ್ನು ಮುಂದೂಡುವಂತೆ ಸೆಷನ್ಸ್ ನ್ಯಾಯಾಲಯಕ್ಕೆ ನಿರ್ದೇಶಿಸಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ಇದಕ್ಕೆ ಒಪ್ಪದ ನ್ಯಾಯಪೀಠ, ‘ಈ ಹಂತದಲ್ಲಿ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಯನ್ನು ಮುಂದೂಡಲು ಆಗುವುದಿಲ್ಲ’ ಎಂಬ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿ, 47 ವರ್ಷದ ಸಂತ್ರಸ್ತ ಮಹಿಳೆ ಮತ್ತು ಎಸ್‌ಐಟಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು. ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.