ADVERTISEMENT

ಈಡಿಗ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ: ಪ್ರಣವಾನಂದ ಶ್ರೀ ನಿರಶನ ಆರಂಭ

​ಪ್ರಜಾವಾಣಿ ವಾರ್ತೆ
Published 20 ಜೂನ್ 2022, 9:01 IST
Last Updated 20 ಜೂನ್ 2022, 9:01 IST
ಆರ್ಯ ಈಡಿಗ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಆರಂಭಿಸಬೇಕು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಸೇಂದಿ ಇಳಿಸಲು ಅನುಮತಿಗೆ ಒತ್ತಾಯಿಸಿ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಆಮರಣಾಂತ ಉಪವಾಸವನ್ನು ಕಲಬುರಗಿ ಜಿಲ್ಲಾಧಿಕಾರಿ ‌ಕಚೇರಿ ಎದುರು ಆರಂಭಿಸಿದ್ದಾರೆ.
ಆರ್ಯ ಈಡಿಗ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಆರಂಭಿಸಬೇಕು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಸೇಂದಿ ಇಳಿಸಲು ಅನುಮತಿಗೆ ಒತ್ತಾಯಿಸಿ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಆಮರಣಾಂತ ಉಪವಾಸವನ್ನು ಕಲಬುರಗಿ ಜಿಲ್ಲಾಧಿಕಾರಿ ‌ಕಚೇರಿ ಎದುರು ಆರಂಭಿಸಿದ್ದಾರೆ.   

ಕಲಬುರಗಿ: ಆರ್ಯ ಈಡಿಗ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಆರಂಭಿಸಬೇಕು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಸೇಂದಿ ಇಳಿಸಲು ಅನುಮತಿಗೆ ಒತ್ತಾಯಿಸಿ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಆಮರಣಾಂತ ಉಪವಾಸವನ್ನು ಇಲ್ಲಿನ ಜಿಲ್ಲಾಧಿಕಾರಿ ‌ಕಚೇರಿ ಎದುರು ಆರಂಭಿಸಿದ್ದಾರೆ.

ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್ ಹಾಗೂ ವಿಜಯಪುರ ಜಿಲ್ಲೆಗಳಿಂದ ಬಂದಿರುವ ಈಡಿಗ ಸಮುದಾಯದವರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಣವಾನಂದ ಸ್ವಾಮೀಜಿ, ಉಡುಪಿ ಜಿಲ್ಲೆಯಲ್ಲಿ ಸೇಂದಿ ಇಳಿಸಲು ಅನುಮತಿ ನೀಡಿದ್ದಾರೆ. ಆದರೆ ಕಲ್ಯಾಣ ‌ಕರ್ನಾಟಕದ ಜಿಲ್ಲೆಗಳಲ್ಲಿ ಅನುಮತಿ ನಿಷೇಧಿಸಲಾಗಿದೆ. ‌ಇದರಿಂದಾಗಿ ಇದೇ ಉದ್ಯೋಗ ನಂಬಿಕೊಂಡ‌ ಸಹಸ್ರಾರು ಮೂರ್ತೆದಾರ ಕುಟುಂಬಗಳು ಬೀದಿಗೆ ಬಿದ್ದಿವೆ. ಬೇರೆ ಉದ್ಯೋಗವೂ ತಿಳಿದಿಲ್ಲ.‌ ಆದ್ದರಿಂದ ‌ಸೇಂದಿ ಇಳಿಸಲು ಅನುಮತಿ ನೀಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನು ಆರಂಭಿಸಿ ₹ 500 ಕೋಟಿ ಅನುದಾನ ಮೀಸಲಿಡಬೇಕು. ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ನಾರಾಯಣ ಗುರುಗಳ ಹೆಸರಿನಲ್ಲಿ ಅಧ್ಯಯನ ಪೀಠ ಆರಂಭಿಸಬೇಕು. ಎಂಎಸ್ಐಎಲ್ ಮಳಿಗೆಗಳಲ್ಲಿ ಈಡಿಗ ಸಮುದಾಯದ ಯುವಕರಿಗೆ ಉದ್ಯೋಗ ನೀಡಬೇಕು. ಈ ಸಮುದಾಯದ ಯುವಕರಿಗೆ ವೈನ್ ಶಾಪ್ ಲೈಸೆನ್ಸ್ ನೀಡುವ ಸಂದರ್ಭದಲ್ಲಿ ಅದ್ಯತೆ ನೀಡಬೇಕು‌ ಎಂದು ಒತ್ತಾಯಿಸಿದರು.

ಉಪವಾಸ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಸಂಸದ ಡಾ.ಉಮೇಶ ಜಾಧವ, ಈಡಿಗ ಸಮುದಾಯದ ಬಗ್ಗೆ ರಾಜ್ಯ ಸರ್ಕಾರಕ್ಕೆ ಸಹಾನುಭೂತಿ ಇದ್ದು, ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದರು.

ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಡಾ.ಶರಣಪ್ರಕಾಶ ಪಾಟೀಲ, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ,‌ ಆಳಂದ ಶಾಸಕ ಸುಭಾಷ್ ಗುತ್ತೇದಾರ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶರಣಕುಮಾರ ಮೋದಿ, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಮಾಜಿ ಸಚಿವ ಬಾಬುರಾವ ಚಿಂಚನಸೂರ, ಚಿತ್ರನಟ ಸುಮನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಯದೇವ ಗುತ್ತೇದಾರ, ಸತೀಶ್ ಗುತ್ತೇದಾರ, ರಾಜೇಶ ಗುತ್ತೇದಾರ, ಹರ್ಷಾನಂದ ಗುತ್ತೇದಾರ ಇತರರು ಭಾಗವಹಿಸಿದ್ದಾರೆ.

ಆಮರಣ ಉಪವಾಸ ಕೈಬಿಡಲು ಸಚಿವರ‌ ಮನವಿ

ಪ್ರಣವಾನಂದ ಸ್ವಾಮೀಜಿ ಅವರು ಹಮ್ಮಿಕೊಂಡಿರುವ ಆಮರಣಾಂತ ಉಪವಾಸವನ್ನು ಕೈಬಿಡುವಂತೆ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.

ಸಮುದಾಯದ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿಗಳ ಮನವೊಲಿಸಲಾಗಿದ್ದು, ಜುಲೈ ಮೊದಲ ವಾರದಲ್ಲಿ ಸ್ವಾಮೀಜಿ ಹಾಗೂ ಸಮಾಜದ ಮುಖಂಡರನ್ನು ಮುಖ್ಯಮಂತ್ರಿಗಳಿಗೆ ಭೇಟಿ ಮಾಡಿಸಲಾಗುವುದು ಎಂದು ವಿಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.