ADVERTISEMENT

ಅರ್ಚಕರಿಗೆ ಪರಿಹಾರ ನೀಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಮೇ 2021, 18:38 IST
Last Updated 18 ಮೇ 2021, 18:38 IST

ಬೆಂಗಳೂರು: ಕೋವಿಡ್‌ ಲಾಕ್‌ಡೌನ್‌ನಿಂದ ದೇವಾಲಯಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿರುವ ಕಾರಣದಿಂದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲ ದೇವಸ್ಥಾನಗಳ ಅರ್ಚಕರಿಗೂ ನೆರವು ನೀಡುವಂತೆ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ– ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ಒತ್ತಾಯಿಸಿದೆ.

ಈ ಕುರಿತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಿರುವ ಒಕ್ಕೂಟದ ಮುಖ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್‌.ಎನ್‌. ದೀಕ್ಷಿತ್‌, ‘ಲಾಕ್‌ಡೌನ್‌ನಿಂದ ಅರ್ಚಕರು ಮತ್ತು ದೇವಸ್ಥಾನದ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಯಾ ದೇವಸ್ಥಾನಗಳ ಖಾತೆಯಲ್ಲಿರುವ ಹಣವನ್ನು ಬಳಸಿಕೊಂಡು ನೆರವು ನೀಡಬೇಕು’ ಎಂದು ಆಗ್ರಹಿಸಿದ್ದಾರೆ.

ದೇವಸ್ಥಾನಗಳಲ್ಲಿ ಪೂಜೆಗೆ ತಗಲುವ ವೆಚ್ಚ ಮತ್ತು ಅರ್ಚಕರ ವೇತನ ಸೇರಿಸಿ ನೀಡುತ್ತಿರುವ ತಸ್ತೀಕ್‌ ಮೊತ್ತದಲ್ಲಿ ಹೆಚ್ಚಳ ಮಾಡಿಲ್ಲ. ಗ್ರಾಮಾಂತರ ಪ್ರದೇಶಗಳಲ್ಲಿ ಅರ್ಚಕರು ಮತ್ತು ಸಿಬ್ಬಂದಿ ತೀವ್ರವಾದ ಸಮಸ್ಯೆಗೆ ಸಿಲುಕಿದ್ದಾರೆ. ತಕ್ಷಣದಲ್ಲೇ ಪರಿಹಾರ ಹಾಗೂ ಆಹಾರದ ಕಿಟ್‌ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.