ವಿಜಯೇಂದ್ರ ಪರ ಬಣದ ಸಭೆ
ದಾವಣಗೆರೆ: ಬಿ.ವೈ.ವಿಜಯೇಂದ್ರ ಅವರನ್ನು ಮುಂಬರುವ ವಿಧಾನಸಭಾ ಚುನಾವಣೆಯವರೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮುಂದುವರಿಸುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ಭಾನುವಾರ ಇಲ್ಲಿ ಸೇರಿದ್ದ ವಿಜಯೇಂದ್ರ ಪರ ಬಣ ನಿರ್ಣಯ ಕೈಗೊಂಡಿತು.
ಮಾಜಿ ಸಚಿವರಾದ ಎಂ.ಪಿ. ರೇಣುಕಾಚಾರ್ಯ ಹಾಗೂ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನೇತೃತ್ವದಲ್ಲಿ 55 ಜನ ಮಾಜಿ ಶಾಸಕರು ಹಾಗೂ ಮಾಜಿ ಸಚಿವರು ಸಭೆಯಲ್ಲಿ ಪಾಲ್ಗೊಂಡಿದ್ದರು. ಹೈಕಮಾಂಡ್ ಮಧ್ಯಪ್ರವೇಶದ ಬಳಿಕ ಬಣ ರಾಜಕೀಯಕ್ಕೆ ಕಡಿವಾಣ ಬಿದ್ದಿದೆ ಎನ್ನುವಾಗಲೇ ಇಲ್ಲಿ ನಡೆದ ಸಭೆ, ಪಕ್ಷದೊಳಗಿನ ಆಂತರಿಕ ತಿಕ್ಕಾಟ ತಾರಕಕ್ಕೇರಿದೆ ಎಂಬುದನ್ನು ಬಹಿರಂಗಪಡಿಸಿದೆ.
ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಲು ಶೀಘ್ರದಲ್ಲೇ ದೆಹಲಿಗೆ ನಿಯೋಗ ತೆರಳಲು ಸಭೆ ತೀರ್ಮಾನಿಸಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಪಕ್ಷದ ರಾಷ್ಟ್ರೀಯ ನಾಯಕರನ್ನು ಮತ್ತೊಮ್ಮೆ ಭೇಟಿಯಾಗಲು ಸಭೆಯಲ್ಲಿದ್ದ ಎಲ್ಲರೂ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಸಭೆಯ ನಂತರ ಪಕ್ಷದ ಮೂಲಗಳು ಮಾಹಿತಿ ನೀಡಿದವು.
ಯತ್ನಾಳ ವಿರುದ್ಧ ಪಕ್ಷದ ವರಿಷ್ಠರು ಶಿಸ್ತುಕ್ರಮ ಜರುಗಿಸದೇ ಇರುವ ಬಗ್ಗೆ ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಮುಖರು ಅಸಮಾಧಾನ ಹೊರಹಾಕಿದ್ದಾರೆ. ಇದು ತಾರ್ಕಿಕ ಅಂತ್ಯ ಕಾಣುವವರೆಗೂ ಹೋರಾಟ ಮುಂದುವರಿಸಲು ನಿರ್ಧರಿಸಿದ್ದಾರೆ.
‘ಬಿ.ವೈ. ವಿಜಯೇಂದ್ರ ಸಾರಥ್ಯದಲ್ಲಿ ವಿಧಾನಸಭಾ ಚುನಾವಣೆ ಎದುರಿಸಿದರೆ 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಸಾಧ್ಯವಿದೆ. ಇಲ್ಲವಾದರೆ 100 ಕ್ಷೇತ್ರಗಳಲ್ಲೂ ಪಕ್ಷ ಗೆಲ್ಲುವುದು ಕಷ್ಟ. ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭಾ ಚುನಾವಣೆಯನ್ನು ವಿಜಯೇಂದ್ರ ಅವರ ನೇತೃತ್ವದಲ್ಲಿಯೇ ಎದುರಿಸಬೇಕು. ಅಲ್ಲಿಯವರೆಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಅವರನ್ನು ಮುಂದುವರಿಸಬೇಕು’ ಎಂದು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸುದ್ದಿಗಾರರಿಗೆ ಹೇಳಿದರು.
‘ಜನವರಿಯಲ್ಲಿ ಬದಲಾವಣೆ ನಿರೀಕ್ಷೆ’
ಶಿವಮೊಗ್ಗ: ಜನವರಿಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರ ಅವರು ಬದಲಾಗುವ ನಿರೀಕ್ಷೆ ಇದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು.
‘ನಾನು 30 ವರ್ಷಗಳಿಂದ ರಾಜ್ಯ ರಾಜಕಾರಣದಲ್ಲಿದ್ದೇನೆ. ಬಿಜೆಪಿ ಹೈಕಮಾಂಡ್ ರಾಜ್ಯ ಘಟಕದ ಅಧ್ಯಕ್ಷರನ್ನು ಬದಲಾಯಿಸುವಾಗ ಹಿಂದುಳಿದ ವರ್ಗದವರನ್ನು ಪರಿಗಣಿಸಿದರೆ ಪಕ್ಷದ ಅಧ್ಯಕ್ಷ ಹುದ್ದೆಗೆ ನನ್ನನ್ನು ಪರಿಗಣಿಸುವಂತೆ ಹೈಕಮಾಂಡ್‌ಗೆ ಕೋರಿದ್ದೇನೆ’ ಎಂದು ಇಲ್ಲಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
‘ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಭಿನ್ನಮತ ಚಟುವಟಿಕೆಗಳನ್ನು ಕೇಂದ್ರದ ನಾಯಕರು ಗಮನಿಸಿದ್ದಾರೆ. ಶೀಘ್ರವೇ ಅವರು ಕಠಿಣ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ’ ಎಂದು ಹೇಳಿದರು.
ಆಡಳಿತಾರೂಢ ಕಾಂಗ್ರೆಸ್ ಟೀಕೆ ಮಾಡುವುದು ಬಿಟ್ಟು ಸ್ವಪಕ್ಷೀಯ ನಾಯಕರ ವಿರುದ್ಧ ಬಸನಗೌಡ ಪಾಟೀಲ ಯತ್ನಾಳ ಬಹಿರಂಗ ಆರೋಪ ಮಾಡುತ್ತಿರುವುದು ತಪ್ಪು.–ಜಿ.ಸೋಮಶೇಖರ ರೆಡ್ಡಿ, ಮಾಜಿ ಶಾಸಕ
ನನ್ನ ವಿರುದ್ಧ ಏನೂ ಕ್ರಮ ಕೈಗೊಳ್ಳಲು ಆಗದಿರುವುದಕ್ಕೆ ಅವರಿಗೆ ಹೆದರಿಕೆ ಆಗಿರಬೇಕು, ಹೀಗಾಗಿ ಸಭೆ ಮಾಡುತ್ತಿದ್ದಾರೆ, ಅವರು ಎಷ್ಟು ಸಭೆ ಮಾಡುತ್ತಾರೋ ಅಷ್ಟು ಒಳ್ಳೆಯದು.–ಬಸನಗೌಡ ಪಾಟೀಲ ಯತ್ನಾಳ, ಶಾಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.