ಬೆಂಗಳೂರು: ಸಾಂಕ್ರಾಮಿಕ ರೋಗದ ಕಾರಣದಿಂದ 2020–2021ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ವಿನಾಯಿತಿ ನೀಡುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.
ವಕೀಲ ಕೆ. ಗುರುದತ್ತ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.
‘ಲಾಕ್‌ಡೌನ್ ಕಾರಣದಿಂದ ಬಾಡಿಗೆ ರೂಪದಲ್ಲಿ ಬರುತ್ತಿದ್ದ ವರಮಾನ ಈಗ ಇಲ್ಲದ ಕಾರಣ ವಸತಿ ಮತ್ತು ವಾಣಿಜ್ಯ ಕಟ್ಟಡಗಳ ಮಾಲೀಕರು ಭಾರಿ ನಷ್ಟ ಅನುಭವಿಸಿದ್ದಾರೆ. ಹೀಗಾಗಿ, ಆಸ್ತಿ ತೆರಿಗೆ ಪಾವತಿಸದಂತೆ ವಿನಾಯಿತಿ ನೀಡಬೇಕು’ ಎಂದು ಅರ್ಜಿದಾರರು ತಿಳಿಸಿದ್ದಾರೆ.
‘ಲಾಕ್‌ಡೌನ್ ಕಾರಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಘೋಷಿಸಿದೆ. ಬಾಡಿಗೆ ಪಾವತಿಸುವಂತೆ ಒತ್ತಾಯ ಮಾಡಬಾರದು ಎಂದೂ ಸೂಚಿಸಿವೆ. ಆದರೆ, ಆಸ್ತಿ ಮಾಲೀಕರಿಗೆ ಯಾವುದೇ ಪ್ರೋತ್ಸಾಹ ನೀಡಿಲ್ಲ. ಹೀಗಾಗಿ, ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.