ADVERTISEMENT

ಮಹಿಷ ದಸರೆಗೆ ಅಡ್ಡಿ: ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ವಿರುದ್ಧ ಪ್ರತಿಭಟನೆ

ದಲಿತ ಸಂಘರ್ಷ ಸಮಿತಿ ಹಾಗೂ ಮೈಸೂರು ವಿ.ವಿ. ವಿದ್ಯಾರ್ಥಿಗಳ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2019, 12:58 IST
Last Updated 28 ಸೆಪ್ಟೆಂಬರ್ 2019, 12:58 IST
ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಾರ್ಯಕರ್ತರು ಶನಿವಾರ ಸಂಸದ ಪ್ರತಾಪಸಿಂಹ ವಿರುದ್ಧ ಪ್ರತಿಭಟನೆ ನಡೆಸಿದರು
ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಾರ್ಯಕರ್ತರು ಶನಿವಾರ ಸಂಸದ ಪ್ರತಾಪಸಿಂಹ ವಿರುದ್ಧ ಪ್ರತಿಭಟನೆ ನಡೆಸಿದರು   

ಮೈಸೂರು: ಸಂಸದ ಪ್ರತಾಪಸಿಂಹ ವಿರುದ್ಧ ಸತತ 2ನೇ ದಿನವಾದ ಶನಿವಾರವೂ ನಗರದಲ್ಲಿ ಪ್ರತಿಭಟನೆಗಳು ಮುಂದುವರಿದಿವೆ.

ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

‌ಪೊಲೀಸರಿಗೆ ಕಾನೂನಿನ್ವಯ ಕಾರ್ಯನಿರ್ವಹಿಸಿ ಎಂದು ಹೇಳುವ ಬದಲು ಕಾನೂನಿನ್ವಯ ಕಾರ್ಯನಿರ್ವಹಿಸುತ್ತಿದ್ದ ಪೊಲೀಸರ ಮೇಲೆಯೇ ಮೂರನೇ ದರ್ಜೆಯ ಗೂಂಡಾನಂತೆ ವರ್ತಿಸಿರುವುದು ಸರಿಯಲ್ಲ ಎಂದು ಖಂಡಿಸಿದರು.

ADVERTISEMENT

ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ನಡೆಸಿರುವ ಪ್ರತಾಪಸಿಂಹ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಇವರನ್ನು ಗಡಿಪಾರು ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಉರಿಲಿಂಗಿಪೆದ್ದಿ ಮಠದ ಜ್ಞಾನಪ್ರಕಾಶಸ್ವಾಮೀಜಿ, ಸಮಿತಿಯ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ, ಜಿಲ್ಲಾ ಸಂಘಟನಾ ಸಂಚಾಲಕ ಕೆ.ಕೆ.ಜಗದೀಶ್, ಜಿಲ್ಲಾ ಸಂಚಾಲಕ ಬೆಟ್ಟಯ್ಯಕೋಟೆ ಹಾಗೂ ಇತರರು ಇದ್ದರು.

ಪ್ರತಾಪಸಿಂಹ ಪ್ರತಿಕೃತಿ ದಹನ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ನೇತೃತ್ವದಲ್ಲಿ ಕಾರ್ಯಕರ್ತರು ಮಾನಸಗಂಗೋತ್ರಿಯ ಕುವೆಂಪು ಪ್ರತಿಮೆ ಮುಂಭಾಗ ಶನಿವಾರ ಪ್ರತಾಪಸಿಂಹ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

‘ಮಹಿಷ ದಸರೆಯನ್ನು ಗೂಂಡಾ ಪ್ರವೃತ್ತಿಯ ಮೂಲಕ ಹತ್ತಿಕ್ಕಿರುವ ಸಂಸದ ಪ್ರತಾಪಸಿಂಹ ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಮೈಸೂರು ವಿ.ವಿ ಯಲ್ಲಿ ನಡೆಯುವ ಮೈಸೂರು ದಸರಾ ಮಹೋತ್ಸವಕ್ಕೆ ನಮ್ಮ ವಿರೋಧ ಇದೆ. ಕೂಡಲೇ ನಮ್ಮ ವಿ.ವಿಯಲ್ಲಿ ನಡೆಯುವ ಎಲ್ಲ ಬಗೆಯ ದಸರಾ ಮಹೋತ್ಸವ ಕಾರ್ಯಕ್ರಮವನ್ನು ರದ್ದುಪಡಿಸಬೇಕು. ಆ ಹಣವನ್ನು ನೆರೆ ಸಂತ್ರಸ್ತರಿಗೆ ನೀಡಬೇಕು’ ಎಂದು ಅವರು ಆಗ್ರಹಿಸಿದರು.‌

ಸಂಘದ ಅಧ್ಯಕ್ಷ ಮರಿದೇವಯ್ಯ, ಪ್ರಧಾನ ಕಾರ್ಯದರ್ಶಿ ಬಿ.ಎಲ್.ರಘು, ಕಾರ್ಯದರ್ಶಿ ಅಸ್ಕರ್ ಅಲಿ, ಖಜಾಂಚಿ ಮನೋಜ್‌ಕುಮಾರ್, ಸಂಘಟನಾ ಕಾರ್ಯದರ್ಶಿ ಮಹೇಶ್‌ ಸೋಸ್ಲೆ, ಮಹದೇವಮೂರ್ತಿ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.