ADVERTISEMENT

ಉತ್ತರ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2018, 7:20 IST
Last Updated 2 ಆಗಸ್ಟ್ 2018, 7:20 IST
ಹುಬ್ಬಳ್ಳಿ ಚನ್ನಮ್ಮ ವೃತ್ತದಲ್ಲಿ ಗುರುವಾರ ಬೆಳಿಗ್ಗೆ ಪ್ರತ್ಯೇಕ ರಾಜ್ಯ ಹೋರಾಟಗಾರರು ಪ್ರತಿಭಟನೆ ನಡೆಸಿದರು. –ಪ್ರಜಾವಾಣಿ ಚಿತ್ರ.
ಹುಬ್ಬಳ್ಳಿ ಚನ್ನಮ್ಮ ವೃತ್ತದಲ್ಲಿ ಗುರುವಾರ ಬೆಳಿಗ್ಗೆ ಪ್ರತ್ಯೇಕ ರಾಜ್ಯ ಹೋರಾಟಗಾರರು ಪ್ರತಿಭಟನೆ ನಡೆಸಿದರು. –ಪ್ರಜಾವಾಣಿ ಚಿತ್ರ.    

ಬೆಳಗಾವಿ:ಉತ್ತರ ಕರ್ನಾಟಕಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ, ಆಗಸ್ಟ್ 2ರಂದು (ಗುರುವಾರ) ನೀಡಿದ್ದ ಬಂದ್‌ ಕರೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಉತ್ತರ ಕರ್ನಾಟಕ ಅಭಿವೃದ್ಧಿಗೆ ಆಗ್ರಹಿಸಿ ಹೋರಾಟ ಸಮಿತಿ ಸದಸ್ಯರು ಮಧ್ಯಾಹ್ನ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಿದ್ದಾರೆ.

ಬಾಗಲಕೋಟೆ:ಉದ್ದೇಶಿತ ಬಂದ್ ಕರೆ ಹಿಂದಕ್ಕೆ ಪಡೆದಿರುವುದಾಗಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಬುಧವಾರವೇ ಪ್ರಕಟಿಸಿದ್ದ ಹಿನ್ನೆಲೆಯಲ್ಲಿ ಗುರುವಾರ ಜಿಲ್ಲೆಯಲ್ಲಿ ಜನಜೀವನ ಎಂದಿನಂತೆಯೇ ಇದೆ.

ADVERTISEMENT

ಹಾವೇರಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಒತ್ತಾಯಿಸಿ ಸಂಘಟನೆಗಳು ಕರೆ ನೀಡಿದ್ದ ಗುರುವಾರದ ಬಂದ್ ಜನಜೀವನದ ಯಾವುದೇ ಪರಿಣಾಮ ಬೀರಲಿಲ್ಲ.

ಅಂಗಡಿ ಮುಂಗಟ್ಟುಗಳು ತೆರೆದಿದ್ದು, ವ್ಯಾಪಾರ ವಹಿವಾಟು ಎಂದಿನಂತೆ ಸಹಜವಾಗಿದೆ. ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳೂ ಕಾರ್ಯ ನಿರ್ವಹಿಸುತ್ತಿವೆ. ಬಸ್ ಹಾಗೂ ಸಾರಿಗೆ ಸಂಚಾರವೂ ಪ್ರತಿನಿತ್ಯದಂತೆ ಸಾಗಿದೆ.

ಆದರೆ, ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ಅಭಿವೃದ್ಧಿಯಲ್ಲಿ ಆದ್ಯತೆ ನೀಡಬೇಕು ಎಂದು ಆಗ್ರಹಿಸಿ ಇಲ್ಲಿನ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮನವಿ ನೀಡುವುದಾಗಿ ವಿವಿಧ ಸಂಘಟನೆಗಳು ತಿಳಿಸಿವೆ.

***


ಪ್ರತ್ಯೇಕ‌ ರಾಜ್ಯ ಪ್ರಸ್ತಾವಕ್ಕೆ ವಿರೋಧ
ರಾಮನಗರ:
ಪ್ರತ್ಯೇಕ ರಾಜ್ಯ ಪ್ರಸ್ತಾವ ವಿರೋಧಿಸಿ ಕರ್ನಾಟಕ‌ ರಕ್ಷಣಾ ವೇದಿಕೆಯ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭ ಜಿಲ್ಲಾ ಕಚೇರಿ ಬಾಗಿಲಲ್ಲೇ ಕರವೇ ಕಾರ್ಯಕರ್ತರನ್ನು ಪೊಲೀಸರು ತಡೆದರು. ಶಾಂತಿಯುತವಾಗಿ‌ ಮನವಿ ಸಲ್ಲಿಸಲಿದ್ದೇವೆ ಒಳಗೆ ಬಿಡಿ ಎನ್ನುವ ಕರವೇ ಮನವಿಗೆ ಪೊಲೀಸರು ಸ್ಪಂದಿಸಲಿಲ್ಲ. ಹೀಗಾಗಿ ವಾಗ್ವಾದ ನಡೆಯಿತು. ಅಂತಿಮವಾಗಿ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಶಾಂತ್ ಸ್ಥಳಕ್ಕೆ ಧಾವಿಸಿ ಮನವಿ ಸ್ವೀಕರಿಸಿದರು.‌ 15 ಮಂದಿ ಕರವೇ ಕಾರ್ಯಕರ್ತರನ್ನು ತಡೆಯಲು 50ಕ್ಕೂ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.