ADVERTISEMENT

ಪಿಎಸ್‌ಐ ಹಗರಣ: ದಿವ್ಯಾ ಸಲ್ಲಿಸಿದ್ದ ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 21:15 IST
Last Updated 2 ಆಗಸ್ಟ್ 2022, 21:15 IST
   

ಬೆಂಗಳೂರು:ಕರ್ನಾಟಕ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ವಿಜ್ಞಾನ ಶಿಕ್ಷಣ (ನಿಯಂತ್ರಣ) ಪ್ರಾಧಿಕಾರಕ್ಕೆಡಾ.ಎನ್‌.ರಾಮಕೃಷ್ಣ ರೆಡ್ಡಿ ಅವರನ್ನುವಿಶೇಷ ಅಧಿಕಾರಿಯಾಗಿ ನೇಮಿಸಿದ್ದನ್ನು ಪ್ರಶ್ನಿಸಿ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್ಐ) ನೇಮಕಾತಿ ಹಗರಣದ ಆರೋಪಿಯಲ್ಲಿ ಒಬ್ಬರಾದ ದಿವ್ಯಾ ರಾಜೇಶ್‌ ಹಾಗರಗಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಹಂಗಾಮಿ ಮುಖ್ಯ ನ್ಯಾಯ ಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳ ವಾರ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ದಿವ್ಯಾ ಪರ ವಕೀಲರು, ‘ಅರ್ಜಿದಾರರನ್ನು ಯಾವ ಕಾರಣಕ್ಕಾಗಿ ಬಂಧಿಸ ಲಾಗಿದೆ ಎಂಬ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಲಾಗುವುದು. ಅದಕ್ಕಾಗಿ ಕಾಲಾವಕಾಶ ನೀಡಬೇಕು’ ಎಂದು ಕೋರಿದರು.

ಇದನ್ನು ಒಪ್ಪದ ನ್ಯಾಯಪೀಠ, ‘ದಿವ್ಯಾ, ಕರ್ನಾಟಕ ನರ್ಸಿಂಗ್ ಕೌನ್ಸಿಲ್‌ ನಾಮ ನಿರ್ದೇಶಿತ ಸದಸ್ಯೆಯಾಗಿದ್ದಾರೆ. ಆದರೆ, ಅವರು ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಯಾಗಿ ಈಗ ಜೈಲಿನಲ್ಲಿದ್ದಾರೆ. ಹಾಗಾಗಿ, ಸೇವೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಈ ಅರ್ಜಿಯನ್ನು ಪರಿಗಣಿಸಲು ಸಾಧ್ಯವಿಲ್ಲ’ ಎಂದು ಅರ್ಜಿ ವಜಾಗೊಳಿಸಿತು.

ADVERTISEMENT

ಪಿಎಸ್‌ಐ ನೇಮಕಾತಿ ಹಗರಣದ 18ನೇ ಆರೋಪಿಯಾದ ದಿವ್ಯಾ, ಏ.29ರಂದು ‍ಪುಣೆಯಲ್ಲಿ ಸೆರೆ ಸಿಕ್ಕಿದ್ದು, ಸದ್ಯ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಪ್ರಕರಣದ ಸಂಬಂಧ ಸಿಐಡಿ ಆಗಲೇ 2 ಸಾವಿರಕ್ಕೂ ಹೆಚ್ಚು ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.