ADVERTISEMENT

ಪಿಎಸ್‌ಐ ಹಗರಣ: ಎಸ್‌ಐ ಜಾಮೀನು ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 18 ಜನವರಿ 2023, 23:11 IST
Last Updated 18 ಜನವರಿ 2023, 23:11 IST
   

ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ಇಬ್ಬರು ಅಭ್ಯರ್ಥಿಗಳಿಂದ ತಲಾ ₹ 30 ಲಕ್ಷದಂತೆ ₹ 60 ಲಕ್ಷ ಪಡೆದು ಅಕ್ರಮ ಎಸಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಕೆ. ಹರೀಶ್‌ಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ.

ನ್ಯಾಯಾಂಗ ಬಂಧನದಲ್ಲಿರುವ ಪ್ರಕರಣದ ಆರೋಪಿ ಕೆ. ಹರೀಶ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ. ಉಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

ವಿಚಾರಣೆ ವೇಳೆ ಸಿಐಡಿ ಪರ ವಾದ ಮಂಡಿಸಿದ ವಿಶೇಷ ಪ್ರಾಸಿಕ್ಯೂಟರ್‌ ಪಿ.ಪ್ರಸನ್ನ ಕುಮಾರ್, ‘ಈ ಪ್ರಕರಣವು ಮಧ್ಯಪ್ರದೇಶದ ವ್ಯಾಪಂ ಹಾಗೂ ಬಿಹಾರದ ಎಸ್ಸೆಸ್ಸೆಲ್ಸಿ ಟಾಪರ್‌ಗಳ ಹಗರಣದ ಮಾದರಿಯಲ್ಲಿದೆ. ಇದರಲ್ಲಿ ಪ್ರಭಾವಿ ಸಾರ್ವಜನಿಕ ಸೇವಕರು, ಹಿರಿಯ ಐಪಿಎಸ್ ಅಧಿಕಾರಿಗಳು ಶಾಮೀಲಾಗಿದ್ದಾರೆ. ತನಿಖೆ ಇನ್ನೂ ಮುಂದುವರಿದಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಳು ಕೈಸೇರಬೇಕಿದೆ. ಕಾಲ್‌ ರೆಕಾರ್ಡ್ಸ್‌ ವಿವರಗಳನ್ನು ಪರಿಶೀಲಿಸಬೇಕಿದೆ. ಕೆಲವು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಈ ಹಂತದಲ್ಲಿ ಜಾಮೀನು ನೀಡಿದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ. ಆದ್ದರಿಂದ, ಜಾಮೀನು ಅರ್ಜಿ ವಜಾಗೊಳಿಸಬೇಕು‘ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಜಾಮೀನು ನಿರಾಕರಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.