ಬೆಂಗಳೂರು: ಪದವಿ ಪೂರೈಸಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ (ಪಿಎಸ್‌ಟಿ) ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ (ಜಿಪಿಟಿ) ಪದೋನ್ನತಿ ನೀಡಲು ಮುಖ್ಯಮಂತ್ರಿ ಜತೆ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಶಾಲಾ ಶಿಕ್ಷಣ ಇಲಾಖೆಯ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಶಿಕ್ಷಕ ಮತ್ತು ಪದವೀಧರ ಕ್ಷೇತ್ರ ಪ್ರತಿನಿಧಿಸುವ ವಿಧಾನಪರಿಷತ್ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.
ಪದೋನ್ನತಿ ಕುರಿತು ಇಲಾಖೆ ಸೂಕ್ತ ಕ್ರಮ ಕೈಗೊಂಡಿದೆ. ಕಾನೂನು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಭಿಪ್ರಾಯ ಪಡೆಯಲಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿ ಸಮ್ಮತಿ ವ್ಯಕ್ತಪಡಿಸಿದ್ದಾರೆ. ಅಂತಿಮವಾಗಿ ಚರ್ಚೆ ನಡೆಸಿ, ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ 2020ರವರೆಗಿನ ಖಾಲಿ ಹುದ್ದೆಗಳ ಭರ್ತಿಗೆ ವೇತನಾನುದಾನ ಅಧಿನಿಯಮಕ್ಕೆ ತಿದ್ದುಪಡಿ ತರಬೇಕಿದೆ. ಕಾರ್ಯಭಾರದ ಕೊರತೆ ಇರುವ ಅನುದಾನಿತ ಪದವಿ ಕಾಲೇಜುಗಳ ಉಪನ್ಯಾಸಕರನ್ನು ಸರ್ಕಾರಿ ಪದವಿಪೂರ್ವ ಕಾಲೇಜುಗಳಿಗೆ ನಿಯೋಜನೆ ಮಾಡುವ ಕುರಿತು ಈಗಾಗಲೇ ನೇಮಿಸಲಾಗಿದ್ದು, ಸಮಿತಿಯಿಂದ ವರದಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸ್ನಾತಕೋತ್ತರ ಪದವಿ ಹೊಂದಿದ ಪ್ರೌಢಶಾಲಾ ಸಹ ಶಿಕ್ಷಕರಿಗೆ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ಪರೀಕ್ಷೆ ನಡೆಸಬೇಕು ಎಂಬ ನಿಯಮಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಹೊರಟ್ಟಿ, ‘ಇದು ನ್ಯಾಯ ಸಮ್ಮತವಲ್ಲ. ಈ ಬಗ್ಗೆ ಸಚಿವರು ಅಗತ್ಯ ಕ್ರಮ ವಹಿಸಬೇಕು’ ಎಂದು ಸೂಚಿಸಿದರು.
‘ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಬಿ.ಕಾಂ, ಬಿ.ಇಡಿ ಪದವೀಧರರನ್ನು ಪರಿಗಣಿಸಲು ನಿಯಮದಲ್ಲಿ ಅವಕಾಶ ಇಲ್ಲ. ಕಾನೂನಿಗೆ ತಿದ್ದುಪಡಿ ತರಬೇಕು’ ಎಂದು ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.