ADVERTISEMENT

ನಾಳೆಯಿಂದ ಪಿಯು ಪರೀಕ್ಷೆ ಆರಂಭ: ಪರೀಕ್ಷಾ ಮಂಡಳಿಯಿಂದ ಸಕಲ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2023, 19:32 IST
Last Updated 7 ಮಾರ್ಚ್ 2023, 19:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಮಾರ್ಚ್‌ 9ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗುತ್ತಿದ್ದು, ಸುಸೂತ್ರವಾಗಿ ಪರೀಕ್ಷೆಗಳನ್ನು ನಡೆಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿದ್ಧತೆ ಮಾಡಿಕೊಂಡಿದೆ.

ಈ ಬಾರಿ 7,27,387 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆ ನಡೆಯುವ ರಾಜ್ಯದ 1,109 ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳ ಸಾಗಣೆ, ಸಂಗ್ರಹಣೆ, ಮೌಲ್ಯಮಾಪನ ಕೇಂದ್ರಗಳ ಸುತ್ತ ಬಿಗಿ ಭದ್ರತೆ ಒದಗಿಸಲಾಗುತ್ತದೆ. ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ. ಹಿಂದೆ ನಕಲು ಮಾಡಿದ್ದ ಪರೀಕ್ಷಾ ಕೇಂದ್ರಗಳಲ್ಲಿ ಕಣ್ಗಾವಲು ಇರಿಸಲಾಗಿದೆ. ಜಾಲತಾಣಗಳಲ್ಲಿ ವದಂತಿ ಹಬ್ಬಿಸದಂತೆ, ವದಂತಿಗಳನ್ನು ಹಬ್ಬಿಸುವ ಕಿಡಿಗೇಡಿಗಳ ಮೇಲೆ ನಿಗಾ ಇರಿಸಲು ಸೈಬರ್‌ ಕ್ರೈಂ ಅಧಿಕಾರಿಗಳು, ಸ್ಥಳೀಯ ಪೊಲೀಸರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ತಂಡ ರಚಿಸಲಾಗಿದೆ ಎಂದು ಮಂಡಳಿ ಮಾಹಿತಿ ನೀಡಿದೆ.

ಮೊಬೈಲ್‌ಫೋನ್, ಸ್ಮಾರ್ಟ್‌ವಾಚ್‌, ಇಯರ್‌ಫೋನ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ಪರೀಕ್ಷಾ ಕೇಂದ್ರದ ಒಳಗೆ ತೆಗೆದುಕೊಂಡು ಹೋಗದಂತೆ ನಿರ್ಬಂಧ ವಿಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಭದ್ರತಾ ಕಾರ್ಯ, ಪರೀಕ್ಷಾ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿ, ಸಿಬ್ಬಂದಿಗೂ ಮೊಬೈಲ್‌ ಫೋನ್ ಬಳಕೆಗೆ ಕಡಿವಾಣ ಹಾಕಲಾಗಿದೆ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಕ್ಯಾಮೆರಾ ಸೌಲಭ್ಯ ಇಲ್ಲದ ಮೊಬೈಲ್‌ಫೋನ್ ಬಳಸಲು ಅವಕಾಶ ನೀಡಲಾಗಿದೆ ಎಂದು ಪರೀಕ್ಷಾ ಮಂಡಳಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.