ADVERTISEMENT

ಕೊನೆಗೂ ವರಿಷ್ಠರ ಕಂಡ ಅಶೋಕ: ನಡ್ಡಾ, ಸಿಂಗ್, ಪ್ರಧಾನ್ ಜೊತೆ ಚರ್ಚೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2025, 14:32 IST
Last Updated 27 ಜೂನ್ 2025, 14:32 IST
ಜೆ.ಪಿ.ನಡ್ಡಾ ಅವರಿಗೆ ಆರ್.ಅಶೋಕ ಹೂಗುಚ್ಛ ನೀಡಿದರು. 
ಜೆ.ಪಿ.ನಡ್ಡಾ ಅವರಿಗೆ ಆರ್.ಅಶೋಕ ಹೂಗುಚ್ಛ ನೀಡಿದರು.    

ನವದೆಹಲಿ: ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಕ್ಷಣಾ ಸಚಿವ ರಾಜನಾಥ ಸಿಂಗ್‌, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರನ್ನು ಭೇಟಿ ಮಾಡಿ ಸಮಾಲೋಚಿಸಿದರು. 

ಮಂಗಳವಾರ ಮಧ್ಯಾಹ್ನವೇ ರಾಷ್ಟ್ರ ರಾಜಧಾನಿಗೆ ಧಾವಿಸಿದ್ದ ಅವರು ರಾಷ್ಟ್ರೀಯ ನಾಯಕರ ಭೇಟಿಗೆ ‍ಪ್ರಯತ್ನಿಸಿದ್ದರು. ಬುಧವಾರವೂ ಭೇಟಿ ಸಾಧ್ಯವಾಗಿರಲಿಲ್ಲ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ನಡ್ಡಾ ಅವರನ್ನು ಭೇಟಿ ಮಾಡಲು ಗುರುವಾರ ಕಾಲಾವಕಾಶ ಕೇಳಿದ್ದರು. ಗುರುವಾರ ರಾತ್ರಿ 9 ಗಂಟೆ ವೇಳೆಗೆ ನಡ್ಡಾ ಅವರ ಜತೆಗೆ ಸುದೀರ್ಘ ಚರ್ಚೆ ನಡೆಸಿದರು. 

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ ನಡೆಯಲಿದೆ. ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮುಂದುವರಿಕೆಗೆ ಭಿನ್ನರ ಹಾಗೂ ತಟಸ್ಥ ಬಣದ ವಿರೋಧ ಇದೆ. ಒಂದು ವೇಳೆ, ವಿಜಯೇಂದ್ರ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮುಂದುವರಿಸಿದರೆ ಅಶೋಕ ಬದಲು ಬೇರೊಬ್ಬರನ್ನು ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಲಾಗುತ್ತದೆ ಎಂಬ ಚರ್ಚೆ ಬಿಜೆಪಿ ವಲಯದಲ್ಲಿ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದ ಅಶೋಕ ಅವರು ವಿಪಕ್ಷ ನಾಯಕನಾಗಿ ಎರಡು ವರ್ಷಗಳ ಪ್ರಗತಿ ವರದಿಯನ್ನು ಸಲ್ಲಿಸಿದರು. 

ADVERTISEMENT

ಶುಕ್ರವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅಶೋಕ, ‘ಎಲ್ಲ ನಾಯಕರ ಜತೆಗೆ ಸುದೀರ್ಘವಾಗಿ ಮಾತುಕತೆ ನಡೆಸಿದ್ದೇನೆ. ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಗೊಂದಲ, ಶಾಸಕರ ಹೇಳಿಕೆಗಳ ಬಗ್ಗೆ ಚರ್ಚೆ ನಡೆಸಿದ್ದೇನೆ’ ಎಂದರು. 

‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಆಗಿಲ್ಲ. ನಾನು ಆ ರೇಸ್‌ನಲ್ಲಿ ಇಲ್ಲ. ಜತೆಗೆ, ನಾನು ಯಾವುದೇ ಬಣದಲ್ಲಿ ಗುರುತಿಸಿಕೊಂಡಿಲ್ಲ. ಪ್ರತಿ ಮೂರು ತಿಂಗಳಿಗೊಮ್ಮೆ ಭೇಟಿ ಮಾಡುವಂತೆ ವರಿಷ್ಠರು ಸೂಚಿಸಿದ್ದರು. ಹಾಗಾಗಿ, ಬಂದು ಭೇಟಿ ಮಾಡಿ ರಾಜ್ಯದ ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದೇನೆ’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.