ADVERTISEMENT

ಎಸ್‌.ಎಂ ಕೃಷ್ಣ ಅವರಿಗೆ 'ಕರ್ನಾಟಕ ರತ್ನ' ನೀಡುವಂತೆ ಸಿಎಂಗೆ ಆರ್‌. ಅಶೋಕ ಮನವಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಡಿಸೆಂಬರ್ 2024, 7:16 IST
Last Updated 12 ಡಿಸೆಂಬರ್ 2024, 7:16 IST
<div class="paragraphs"><p>ಆರ್‌. ಅಶೋಕ </p></div>

ಆರ್‌. ಅಶೋಕ

   

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ದಿವಂಗತ ಎಸ್‌.ಎಂ ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ.

ADVERTISEMENT

ಶಾಸಕ, ಸಚಿವ, ಸ್ಪೀಕರ್‌, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್‌ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ

ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಕರ್ನಾಟಕ ರತ್ನ' (ಮರಣೋತ್ತರ) ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ. ಆದ್ದರಿಂದ ತಾವು ಈ ಸಲಹೆಯನ್ನು ಪರಿಗಣಿಸಿ ಅವರಿಗೆ ಕರ್ನಾಟಕ ರತ್ನ ನೀಡಿ ಗೌರವ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.