
ಬೆಂಗಳೂರು: ‘ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
‘ಈ ಸಂಬಂಧ ಬಿಜೆಪಿಯ ರಾಜ್ಯ ಘಟಕದ ಕಾರ್ಯದರ್ಶಿ ಬಿ.ಎಸ್.ಕೇಶವಪ್ರಸಾದ್ ಸಲ್ಲಿಸಿರುವ ಖಾಸಗಿ ದೂರನ್ನು ರದ್ದುಪಡಿಸಬೇಕು’ ಎಂದು ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಸ್.ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಪ್ರಕಟಿಸಿದೆ.
‘ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು ಅದರ ಮಾನಹಾನಿಯಾಗಿದ್ದರೆ, ಪಕ್ಷದ ರಾಷ್ಟ್ರೀಯ ಪ್ರತಿನಿಧಿ ದೂರು ನೀಡಬೇಕಿತ್ತು. ಆದರೆ, ಈ ಪ್ರಕರಣದಲ್ಲಿ ದೂರು ದಾಖಲಿಸುವ ಅಧಿಕಾರಯುತ ಪತ್ರವನ್ನು ಬಿಜೆಪಿಯ ಕರ್ನಾಟಕದ ರಾಜ್ಯ ಘಟಕದ ಅಧ್ಯಕ್ಷರು, ಕಾರ್ಯದರ್ಶಿಗೆ ನೀಡಿದ್ದಾರೆ. ಹಾಗಾಗಿ, ರಾಜ್ಯ ಘಟಕದ ಅಧ್ಯಕ್ಷರನ್ನು ರಾಷ್ಟ್ರೀಯ ಘಟಕದ ಅಧಿಕಾರಯುತ ಪ್ರತಿನಿಧಿ ಎಂದು ಪರಿಗಣಿಸಲಾಗದು. ದೂರುದಾರರನ್ನು ಸಕ್ಷಮ ಪ್ರತಿನಿಧಿ ಅಲ್ಲದ ಕಾರಣ ವಿಚಾರಣೆ ಅಮಾನ್ಯವಾಗುತ್ತದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಪ್ರಕರಣದಲ್ಲಿ ರಾಹುಲ್ ಗಾಂಧಿ 4ನೇ ಆರೋಪಿಯಾಗಿದ್ದು, ಅವರ ವಿರುದ್ಧದ ವಿಚಾರಣೆ ಮಾತ್ರವೇ ರದ್ದಾಗಿದೆ. ಉಳಿದಂತೆ ಇತರೆ ಆರೋಪಿಗಳಾಗಿರುವ ಕೆಪಿಸಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ವಿಚಾರಣೆ ಮುಂದುವರಿಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.